ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ಮದ್ದು ತುಂಬುವ ವೇಳೆ ಸ್ಟೋಟ ಸಂಭವಿಸಿ ತಮಿಳುನಾಡು ಮೂಲಕ ಕಾರ್ಮಿಕನೊಬ್ಬ ಸಾವಿಗೀಡಾಗಿ, ಇಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ತಮಿಳುನಾಡು ಮೂಲದ ರಮೇಶ್(50) ಮೃತ ವ್ಯಕ್ತಿ. ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಹಬ್ಬ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ನಾಲ್ವರು ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು. ಇಂದು ಬೆಳಿಗ್ಗೆ ಪಟಾಕಿಗೆ ಮದ್ದು ತುಂಬುವ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡರು.
ಕೆಬ್ಬಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಯುವ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು.
ಭಾನುವಾರ ರಾತ್ರಿ ಹಬ್ಬ ಮುಗಿದಿದ್ದು, ಸೋಮವಾರ ಬೆಳಗ್ಗೆ ಆಲೆಮನೆಯಲ್ಲಿ ಮೂವರು ಕಾರ್ಮಿಕರು ನಿದ್ರೆ ಮಾಡುತ್ತಿದ್ದಾಗ ಮತ್ತೊಬ್ಬ ಮದ್ದು ತುಂಬುವ ವೇಳೆ ಅವಘಡ ಸಂಭವಿಸಿದೆ. ಸ್ಪೋಟದ ರಭಸಕ್ಕೆ ಆಲೆಮನೆ ಹೆಂಚುಗಳು ಹಾರಿ ಹೋಗಿ, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಮೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡರು.
ಗಾಯಾಳುಗಳನ್ನು ಮಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿಗೆ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲಿಸಿದರು. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.