ಹೃದಯದ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ವಿಚಾರಿಸಿದರು.
ಮಾರ್ಚ್ 26 ರ ಮಂಗಳವಾರ ಸಂಜೆ 7 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೃಹಕ್ಕೆ ಭೇಟಿ ನೀಡಿದ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಭೇಟಿ ನೀಡಿ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿರುವ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿ ಶ್ರೀ ಕಾಲಭೈರವೇಶ್ವರ ಸ್ವಾಮಿಯ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ, ಶಾಸಕ ಎಚ್.ಟಿ.ಮಂಜು, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ನೆಲ್ಲಿಗೆರೆ ಬಾಲು ಮತ್ತಿತರರಿದ್ದರು.
ಚುಂಚಶ್ರೀಗಳು ಭೇಟಿ ನೀಡಿ ತೆರಳಿದ ನಂತರ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಹೆಸರನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಘೋಷಣೆ ಮಾಡಿದರು.




