ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಮೋಸ ಮಾಡಿದಂತೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಣ್ಣ ಅವರಿಗೆ ಅನ್ಯಾಯ ಮಾಡಬೇಡಿ. ಕುಮಾರಣ್ಣ ಅವರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದ್ದರಿಂದ ತಾಲೂಕಿನ ಕೀರ್ತಿಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಒಂದಾಗಿ ಕೆಲಸ ಮಾಡಿ ಗೆಲುವು ತಂದುಕೊಡೋಣ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಡಾ. ನಾರಾಯಣಗೌಡ ಹೇಳಿದರು.
ಇಂದು ಕೆ.ಆರ್.ಪೇಟೆ ಪಟ್ಟಣದ ತಮ್ಮ ನಿವಾಸದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದರು.
ಮಂಡ್ಯ ಲೋಕಸಭಾ ಅಭ್ಯರ್ಥಿ ಕುಮಾರಣ್ಣ ಅವರು ಭರ್ಜರಿ ಗೆಲುವು ಸಾಧಿಸುವುದು ಶತಸಿದ್ಧ, ಆದರೆ ಗೆಲುವಿನ ಅಂತರ ಹೆಚ್ಚಾಗಬೇಕು. ಕೆ.ಆರ್.ಪೇಟೆ ತಾಲ್ಲೂಕಿನಿಂದ ಅತೀ ಹೆಚ್ಚು ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಕುಮಾರಣ್ಣ ಮೋದಿಜಿ ಅವರ ಸರ್ಕಾರದಲ್ಲಿ ಸಚಿವರಾಗ್ತಾರೆ. ಆದ್ದರಿಂದ ನಾವೆಲ್ಲರೂ ಒಂದಾಗಿ ದುಡಿದು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವ ಮೂಲಕ ನರೇಂದ್ರ ಮೋದಿಜಿ ಅವರ ಕೈ ಬಳಪಡಿಸುವ ಕೆಲಸ ಮಾಡೋಣ ಎಂದು ನಾರಾಯಣಗೌಡ ಮನವಿ ಮಾಡಿದರು.
ಏ.4ಕ್ಕೆ ನಾಮಪತ್ರ ಸಲ್ಲಿಕೆ
ಏಪ್ರಿಲ್ 4ರಂದು ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುತ್ತಿದ್ದು ಕೆ ಆರ್ ಪೇಟೆಯಿಂದ ಹತ್ತು ಸಾವಿರಕ್ಕೂ ಹೆಚ್ಚಿನ ಮೈತ್ರಿ ಪಕ್ಷಗಳ ಕಾರ್ಯಕರ್ತರು ಭಾಗವಹಿಸಿ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ನಾರಾಯಣಗೌಡ ಮನವಿ ಮಾಡಿದರು.
ಮುಡಾ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಿಕ್ಕೇರಿಪ್ರಭಾಕರ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜವರಾಯಿಗೌಡ, ಪುರಸಭೆ ಸದಸ್ಯರಾದ ಸಂತೋಷ್, ಹೆಚ್.ಆರ್. ಲೋಕೇಶ್, ವಿ.ಡಿ.ಹರೀಶ್, ಕೆ.ಜಿ.ತಮ್ಮಣ್ಣ, ಅಘಲಯ ಶ್ರೀಧರ್, ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್ ಮತ್ತಿತರರಿದ್ದರು.




