ಕಾಂಗ್ರೆಸ್ ಗ್ಯಾರಂಟಿಗಳಿಂದ ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ವಿರುದ್ಧ ಇಂಟಕ್ ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಿಂದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳೊಂದಿಗೆ ಮೆರವಣಿಗೆ ಮೂಲಕ ಹೆಚ್.ಡಿ.ಕುಮಾರಸ್ವಾಮಿಯವರ ಅವಹೇಳನಕಾರಿ ಹೇಳಿಕೆ ವಿರುದ್ಧ ಧಿಕ್ಕಾರ ಕೂಗುತ್ತಾ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದಿರುವ ಕಾವೇರಿ ವನದ ಮುಂದೆ ಮೇಣದ ಬತ್ತಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಇಂಟಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಯಶೋಧಗೌಡ ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಇಂಟಕ್ ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ. ಚುನಾವಣೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮಾತನಾಡುವ ಭರಾಟೆಯಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಹಿಳೆಯರ ಕುರಿತು ಕನಿಷ್ಠ ಗೌರವ ಇಲ್ಲ ಎಂಬುದನ್ನು ಸಾಬೀತುಪಡಿ ಸಿದ್ದಾರೆ. ಅದಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಅವರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದರು.
ಗೃಹಲಕ್ಷ್ಮಿ ಯೋಜನೆಯಿಂದ ಅನೇಕರಿಗೆ ಪ್ರಯೋಜನವಾಗಿದೆ. ಎಲ್ಲೂ ಆ ಹಣ ದುರುಪಯೋಗವಾಗಿಲ್ಲ. ದುಂದುವೆಚ್ಚವೂ ಆಗಿಲ್ಲ. ಕುಟುಂಬದ ಯಜಮಾನಿಗೆ ಸಿಗುವ ಹಣ ಸದ್ಬಳಕೆ ಆಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ವೈ.ಎಂ.ನಿಂಗೇಗೌಡ, ಮಂಜುಳಾ ಮತ್ತಿತರರು ಭಾಗವಹಿಸಿದ್ದರು.




