ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು 2024-25ನೇ ಶೈಕ್ಷಣಿಕ ಸಾಲಿನ ಶಾಲಾ ತರಗತಿಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಇಂದು ಮಂಡ್ಯ ತಾಲ್ಲೂಕು ಬಿ.ಹೊಸೂರು ಹಾಗೂ ನಾಗಮಂಗಲ ತಾಲ್ಲೂಕಿನ ಕರಡಹಳ್ಳಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಯ ಸ್ವಚ್ಛತೆ, ಶೌಚಾಲಯ, ಕುಡಿಯುವ ನೀರು, ಅಕ್ಷರ ದಾಸೋಹ ಅಡುಗೆ ಮನೆ ಹಾಗೂ ಇನ್ನಿತರೆ ಮೂಲ ಸೌಕರ್ಯಗಳ ಕುರಿತು ಪರಿಶೀಲಿಸಿದರು.
2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ನಿಲಯಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಶುಚಿತ್ವ, ಕುಡಿಯುವ ನೀರು ಸಂಪರ್ಕ, ಶೌಚಾಲಯ ವ್ಯವಸ್ಥೆ ಹಾಗೂ ಇನ್ನಿತರೆ ಮೂಲ ಸೌಕರ್ಯಗಳನ್ನು ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದರು.
ಸರ್ಕಾರಿ ಶಾಲೆಗಳಿಗೆ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಸಾಮಗ್ರಿ ಖರೀದಿ ಹಾಗೂ ಕಾಮಗಾರಿಗಳ ಅವಶ್ಯವಿದ್ದಲ್ಲಿ ನಿಯಮಾನುಸಾರ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.




