Sunday, November 22, 2026

ಪ್ರಾಯೋಗಿಕ ಆವೃತ್ತಿ

ಹೆಣ್ಣು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಭವಿಷ್ಯ ರೂಪಿಸಿ: ಮಮತಾ

ಹೆಣ್ಣು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉತ್ತಮಗೊಳಿಸಲು ಪೋಷಕರು ಮುಂದಾಗಬೇಕೆ ಹೊರತು ಬಾಲ್ಯ ವಿವಾಹಕ್ಕೆ ಉತ್ತೇಜನ ನೀಡಬಾರದೆಂದು ಮಳವಳ್ಳಿ ತಾಲ್ಲೂಕು ಪಂಚಾಯಿತಿ ಇಒ ಎಲ್.ಮಮತಾ ಸಲಹೆ ನೀಡಿದರು.

ಮಳವಳ್ಳಿ ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂಭಾಗ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ನಡೆದ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಾಲ್ಯ ವಿವಾಹ ಎಂಬುವುದು ಸಾಮಾಜಿಕ ಪಿಡುಗು ಆಗಿದ್ದು, 21 ವರ್ಷದ ಒಳಗಿನ ಹುಡುಗ ಹಾಗೂ 18 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡಿದರೇ ಅದು ಅಪರಾಧವಾಗಿರುತ್ತದೆ, ಬಾಲ್ಯ ವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಶಿಕ್ಷಣದ ಅವಶ್ಯಕತೆ ಇದೆ ಎಂದರು.

ಬಾಲ್ಯವಿವಾಹದಿಂದ ಅಪೌಷ್ಟಿಕತೆಯ ಮಕ್ಕಳು ಹುಟ್ಟುವಿಕೆ, ಅಂಗವಿಕಲ, ಬುದ್ದಿಮಾಂಧ್ಯ ಸೇರಿದಂತೆ ನಾನಾ ಸಮಸ್ಯೆಗಳು ಹುಟ್ಟುವ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅಲ್ಲದೇ ಶಿಶುಮರಣ, ತಾಯಿ ಮರಣ ಹೆಚ್ಚಾಗುತ್ತದೆ. ಲಿಂಗತಾರತಮ್ಯ, ಬಡತನ, ಆರ್ಥಿಕ ಪರಿಸ್ಥಿತಿ, ಮೂಢನಂಬಿಕೆ ಹಾಗೂ ಅನಕ್ಷರತೆಯೂ ಇದಕ್ಕೆ ಕಾರಣವಾಗಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಾಮಾಜಿಕ ಪಿಡುಗುಗಳಿಂದ ಉಂಟಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಲು ಯುವ ಸಮೂಹ ಮುಂದಾಗಬೇಕು ಸಲಹೆ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಮಾತನಾಡಿ, ಮಕ್ಕಳಿಗೆ ಉತ್ತಮ ಆರೋಗ್ಯ, ಪೋಷಣೆ, ಶಿಕ್ಷಣ ನೀಡುವುದು ಹಾಗೂ ನಿಂದನೆ ಹಾಗೂ ಶೋಷಣೆ ಮುಕ್ತ ವಾತಾವರಣ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ, ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಯಂತೆ ಜಾಗೃತಿ ಕಾರ್ಯಕ್ರಮ ನಡೆಸಿ ಬಾಲ್ಯವಿವಾಹದಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. 18 ವರ್ಷಕ್ಕಿಂತ ಮುಂಚಿತವಾಗಿ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವುದರಿಂದ ಶಿಕ್ಷಣದಿಂದ ವಂಚಿತರಾಗಿ, ಸಾಮಾಜಿಕ ಖಿನ್ನತೆಯಿಂದ ಒಳಗಾಗುತ್ತಾರೆ. ಮಕ್ಕಳ ಹಕ್ಕುಗಳ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಜನರಿಗೆ ತಿಳಿಸಿಕೊಡಬೇಕು ಎಂದು ಹೇಳಿದರು.

ಜಾಥಾದಲ್ಲಿ ನೂರಾರು ಮಂದಿ ಅಂಗನವಾಡಿ ಕಾರ್ಯಕರ್ತೆಯರು ಭಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಂಚರಿಸಿ ಘೋಷಣೆ ಕೂಗಿ ಜನರಲ್ಲಿ ಜಾಗೃತಿ ಮೂಡಿಸಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿಯರಾದ ಶೈಲಜಾ, ಮಹದೇವಮ್ಮ, ಮಂಜುಳಾ, ಸಿದ್ದರಾಜಮ್ಮ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ