ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ 187 ಕೋಟಿ ರೂ.ಹಣ ಅಕ್ರಮ ವರ್ಗಾವಣೆ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ 187 ಕೋಟಿ ರೂ.ಅಕ್ರಮ ಹಣ ವರ್ಗಾವಣೆ ಹಗರಣ ಸಿಬಿಐ ತನಿಖೆ ನಡೆಸುತ್ತಿರುವ ಹಿನ್ನಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿತ್ತು.ಇಂದು ರಾಜ ಭವನ ಚಲೋ ಕೂಡ ನಡೆಸಿತ್ತು.
ಅಲ್ಲದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಪಡೆದಿದ್ದರು. ಈ ಅಕ್ರಮ ಹಣ ವರ್ಗಾವಣೆಯಲ್ಲಿ ನಾಗೇಂದ್ರರವರ ಆಪ್ತ ನಾಗರಾಜು ಮತ್ತಿತರರು ಭಾಗಿಯಾಗಿರುವುದು ಕಂಡುಬಂದಿತ್ತು.ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಮುಜುಗರ ಆಗದಿರಲೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿ. ನಾಗೇಂದ್ರ ಅವರಿಗೆ ಸೂಚಿಸಿದ್ದರು. ಅದರಂತೆ ಇಂದು ಬಿ.ನಾಗೇಂದ್ರ ಸಿದ್ದರಾಮಯ್ಯನವರ ನಿವಾಸ ಕಾವೇರಿಗೆ ತೆರಳಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾದಂತಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಇಲಾಖೆಯಲ್ಲಿ 187 ಕೋಟಿ ರೂ. ಹಣವನ್ನು ಅಕ್ರಮವಾಗಿ ಹೈದರಾಬಾದಿನ ಬ್ಯಾಂಕುಗಳಿಗೆ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಕೆಲ ಅಧಿಕಾರಿಗಳು ಈ ಅಕ್ರಮ ಹಣ ವರ್ಗಾವಣೆ ಹಿಂದಿದ್ದು, ನಾನು ಈ ಹಗರಣದಲ್ಲಿ ಭಾಗಿಯಾಗಿಲ್ಲದಿದ್ದರೂ ನನ್ನ ಮೇಲೆ ತನಿಖೆ ನಡೆಯುವ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತೇನೆ ಎಂದು ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.ಈಗಾಗಲೇ ಈ ಹಗರಣದಲ್ಲಿ ಐವರ ಬಂಧನವಾಗಿದ್ದು,ಸಿಬಿಐ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.




