Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೈಂಗಿಕ ದೌರ್ಜನ್ಯ| ಆರೋಪಿ ಪ್ರಜ್ವಲ್ ರೇವಣ್ಣಗೆ ಜೂ.10ವರೆಗೆ ಎಸ್‌ಐಟಿ ಕಸ್ಟಡಿ

ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್‌ಐಟಿಯಿಂದ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಸ್ಟಡಿ ಅವಧಿಯನ್ನು ಜೂನ್‌ 10ರವರೆಗೆ ವಿಸ್ತರಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಮೊದಲು ನೀಡಿದ್ದ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆ, ಪ್ರಜ್ವಲ್ ಅವರನ್ನು ಇಂದು ಮಧ್ಯಾಹ್ನ 3 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್‌ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ನ್ಯಾಯಾಧೀಶ ಕೆ.ಎನ್‌ ಶಿವಕುಮಾರ್ ಪುರಸ್ಕರಿಸಿದ್ದಾರೆ. ಆರೋಪಿ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಹಾಜರಿದ್ದರು.

ಮೇ 31ರಂದು ತಡರಾತ್ರಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಜ್ವಲ್‌ರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು, ಅಂದು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿ ಜೂನ್‌ 6ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದಿದ್ದರು.

ಪ್ರಜ್ವಲ್‌ ವಿರುದ್ಧ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಅವುಗಳ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ.

ಶಾಸಕ ಹೆಚ್‌. ಡಿ ರೇವಣ್ಣ ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ), 376,506,505 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2) (ಎನ್‌), 506, 354ಎ(1)(ii),354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ, ಬೆಂಗಳೂರಿನ ಸಿಐಡಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್)‌, 376(2)(ಕೆ), 506, 354ಎ(1)(ii),354(ಬಿ), 354(ಸಿ) ಮತ್ತು ಐಟಿ ಕಾಯಿದೆ ಸೆಕ್ಷನ್‌ 66ಇ ಅಡಿಪ್ರಜ್ವಲ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!