ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ರಾಜನಾಥ್ ಸಿಂಗ್, ಅಮಿತ್ ಶಾ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿರ್ಮಲಾ ಸೀತಾರಾಮನ್ ಕೂಡ ಹೊಸ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ 8,000 ಕ್ಕೂ ಹೆಚ್ಚು ಅತಿಥಿಗಳೊಂದಿಗೆ, ಮೋದಿ ಮತ್ತು ಅವರ ಮಂತ್ರಿ ಮಂಡಲದ ನೂತನ ಸವಿವರು ಅಧಿಕಾರ ಸ್ವೀಕಾರ ಮಾಡಿದರು. ಒಟ್ಟು 66 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಇತರರು ಸೇರಿದಂತೆ ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ಹಲವಾರು ಗಣ್ಯರು ಸಮಾರಂಭದಲ್ಲಿ ಭಾಗವಹಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜ್ಯ ಐವರಿಗೆ ಮಂತ್ರಿಗಿರಿ
ಕೇಂದ್ರ ಸಂಪುಟದಲ್ಲಿ ಕರ್ನಾಟಕಕ್ಕೆ ಐದು ಸಚಿವ ಸ್ಥಾನ ಸಿಕ್ಕಿರುವುದು ಖಾತರಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದ ಮಂಡ್ಯ ಸಂಸದ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಇಂದು ನಡೆದ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ತುಮಕೂರು ಸಂಸದ ವಿ.ಸೋಮಣ್ಣ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಾಂದ್ಲಾಜೆ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ ಜೋಶಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.




