ಮಂಡ್ಯ ಜಿಲ್ಲೆಯಲ್ಲಿ ಜೂನ್ 14 ರಿಂದ 22 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು ಒಟ್ಟು 5827 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 2ನೇ ಹಂತದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದರ ಸಂಬಂಧ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 3939 ಗಂಡು, ಹೆಣ್ಣು-1888 ಒಟ್ಟು 5827 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ನೋಂದಣಿಯಾಗಿದ್ದು, ಅದರಲ್ಲಿ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಗಂಡು-661, ಹೆಣ್ಣು-244 ಒಟ್ಟು 905, ಮದ್ದೂರು ತಾಲ್ಲೂಕಿನಲ್ಲಿ ಗಂಡು-808, ಹೆಣ್ಣು-368, ಒಟ್ಟು 1176, ಮಳವಳ್ಳಿ ತಾಲ್ಲೂಕಿನಲ್ಲಿ ಗಂಡು-722, ಹೆಣ್ಣು-501, ಒಟ್ಟು 1223, ಮಂಡ್ಯ ದಕ್ಷಿಣ ವಲಯ ಗಂಡು-450, ಹೆಣ್ಣು-213, ಒಟ್ಟು 663, ಮಂಡ್ಯ ಉತ್ತರ ವಲಯ ಗಂಡು-124, ಹೆಣ್ಣು-56, ಒಟ್ಟು 180, ನಾಗಮಂಗಲ ಗಂಡು-422, ಹೆಣ್ಣು-174, ಒಟ್ಟು 596, ಪಾಂಡವಪುರ ಗಂಡು 426, ಹೆಣ್ಣು-198, ಒಟ್ಟು 624 ಶ್ರೀರಂಗಪಟ್ಟಣ ಗಂಡು 326, ಹೆಣ್ಣು-134, ಒಟ್ಟು 460, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ನೋಂದಣಿಯಾಗಿದ್ದಾರೆ ಎಂದರು.
ಪರೀಕ್ಷೆಗಾಗಿ 19 ಪ್ರೌಢಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಿ ಪರೀಕ್ಷಾ ಮಂಡಳಿಗೆ ಮಾಹಿತಿ ಸಲ್ಲಿಸಲಾಗಿದೆ. ಎಲ್ಲಾ 19 ಪರೀಕ್ಷಾ ಕೇಂದ್ರಗಳಿಗೂ ಓರ್ವ ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. 350 ಹಾಗೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಪರೀಕ್ಷಾ ಕೇಂದ್ರಗಳಿಗೆ ಓರ್ವ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ
ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ಹಾಗೂ ಪ್ರತಿ ಬ್ಲಾಕ್ ಗಳಿಗೆ ಓರ್ವ ಬ್ಲಾಕ್ ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಪರೀಕ್ಷೆಯು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಬೇಕು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.
ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದರು.
ಬ್ಲಾಕ್ ಹಂತದಲ್ಲಿ ಎಲ್ಲಾ ಪರೀಕ್ಷ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಓರ್ವ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಹಂತದಲ್ಲಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.
ಮಳೆಗಾಲ ಶುರುವಾಗಿರುವುದರಿಂದ ಪರೀಕ್ಷೆ ಕೊಠಡಿಗಳಲ್ಲಿ ನೀರು ಸೋರಿಕೆ ಇದ್ದರೆ ಈಗಲೇ ಅದನ್ನು ಸರಿಪಡಿಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್ ಶಿವರಾಮೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ ಮೋಹನ್, ಬಿ.ಇ.ಒ ಮಹದೇವ, ಚಂದ್ರಶೇಖರ್, ಸೌಭಾಗ್ಯ, ಶಿಕ್ಷಣಾಧಿಕಾರಿ ಚಂದ್ರಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




