ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಂಡ್ಯನಗರದಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ರಸ್ತೆತಡೆ ಮಾಡಿದರು.
ಮಂಡ್ಯನಗರದ ಸಂಜಯ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದರು.
ಪೆಟ್ರೋಲ್-ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಅವೈಜ್ಞಾನಿಕವಾದದ್ದು. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ, ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ರಾಜ್ಯ ಸರ್ಕಾರ ಜನರ ಜೇಬಿಗೆ ಕೈ ಹಾಕಿದೆ. ಬೆಲೆ ಏರಿಕೆಯಿಂದಾಗಿ ಮುಂಬರುವ ದಿನಗಳಲ್ಲಿ ಸಾರಿಗೆ ಹಾಗೂ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಳವಾಗಲಿದೆ. ಮಧ್ಯಮ ವರ್ಗ ಹಾಗೂ ಬಡವರ ಜೀವನ ದುಸ್ತರವಾಗಲಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ಸಹಜವಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ. ಇದರಿಂದಾಗಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಇನ್ನೂ ದುಬಾರಿಯಾಗಲಿದೆ. ಹಾಗಾಗಿ ಈ ಕೂಡಲೇ ತೈಲ ಬೆಲೆ ಏರಿಕೆ ಮಾಡಿರುವುದನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಅಶೋಕ್ ಜಯರಾಂ, ವಸಂತ್ಕುಮಾರ್, ವಿವೇಕ್, ಸಿ.ಟಿ.ಮಂಜುನಾಥ್ ಮತ್ತಿತರರಿದ್ದರು.