Saturday, November 21, 2026

ಪ್ರಾಯೋಗಿಕ ಆವೃತ್ತಿ

ರೈತರ ಹಿತ ಕಾಯುವ ಖಾಸಗಿ ಮಸೂದೆ ಮಂಡಿಸಲು ಹೆಚ್.ಡಿ.ಕುಮಾರಸ್ವಾಮಿಗೆ ಆಗ್ರಹ

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಒತ್ತಾಯದ ಬಗ್ಗೆ ಸಂಸತ್ ದಲ್ಲಿ ಮಂಡ್ಯ ಸಂಸದ ಎಚ್ ಡಿ ಕುಮಾರಸ್ವಾಮಿಯವರು ಖಾಸಗಿ ಮಸೂದೆ ಮಂಡಿಸಬೇಕೆಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

ಮಂಡ್ಯದಲ್ಲಿ ಲೋಕಸಭಾ ಸದಸ್ಯ ಹೆಚ್.ಡಿ.ಕುಮಾರಸ್ವಾಮಿ ಅವರ ಕಚೇರಿ ಸಿಬ್ಬಂದಿ ಮನವಿ ಪತ್ರ ಸಲ್ಲಿಸಿದ ಅವರು, ಲೋಕಸಭೆ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಸೇರಿಸಿತ್ತು. ಈ ಕಾರಣ ರೈತರು ಸಾರ್ವಜನಿಕರು ಎಚ್ ಡಿ ಕುಮಾರಸ್ವಾಮಿ ಅವರನ್ನು ಸಂಸದರಾಗಿ ಆಯ್ಕೆ ಮಾಡಿ ಕಳುಹಿಸಿದ್ದಾರೆ, ಆದ್ದರಿಂದ ಎಲ್ಲಾ ವಿಷಯಗಳ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸುವುದು ಅವರ ಜವಾಬ್ದಾರಿಯಾಗಿದೆ ಎಂದು ನೆನಪಿಸಿದರು.

ರೈತರು ಮತ್ತು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಖಾಸಗಿ ಮಸೂದೆಗಳನ್ನು ಕುಮಾರಸ್ವಾಮಿ ಅವರು ಗಂಭೀರವಾಗಿ ಮಂಡಿಸದಿದ್ದರೆ ಅವರ ಮತ್ತು ಬಿಜೆಪಿಯ ಅಭಿಪ್ರಾಯಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ದಕ್ಷಿಣ ಭಾರತ ರಾಜ್ಯ ರೈತ ಸಂಘಟನೆಗಳು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ರೈತರು ಕೃಷಿ ಕಾನೂನುಗಳ ವಿರುದ್ಧ ಮತ್ತು ಎಂಎಸ್‌ಪಿ ಗ್ಯಾರಂಟಿ ಕಾನೂನನ್ನು ಜಾರಿಗೆ ತರಲು ಐತಿಹಾಸಿಕ ಚಳವಳಿಯನ್ನು ನಡೆಸಿದ ಪರಿಣಾಮ ಕೇಂದ್ರ ಸರ್ಕಾರ 3 ಕೃಷಿ ಕಾನೂನುಗಳನ್ನು ಹಿಂಪಡೆದು ಎಂಎಸ್‌ಪಿ ಗ್ಯಾರಂಟಿ ಕಾನೂನು ಮಾಡಲು ಸಮಿತಿ ರಚನೆ ಮಾಡುವುದಾಗಿ ಘೋಷಿಸಿತ್ತು. ಆದರೆ ಇದುವರೆಗೆ ಜಾರಿಯಾಗಿಲ್ಲ, ಎಂಎಸ್‌ಪಿ ಖಾತರಿ ಕಾನೂನನ್ನು ಜಾರಿಗೆ ತರಲು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದೇವೆ ಎಂದಿದ್ದಾರೆ.

ಇಡೀ ದೇಶದ ರೈತರಿಗೆ ಎಂಎಸ್‌ಪಿ ದರದಲ್ಲಿ ಎಲ್ಲಾ ಬೆಳೆಗಳನ್ನು ಖರೀದಿಸಲು ಖಾತರಿ ಕಾನೂನು ರೂಪಿಸಬೇಕು ಮತ್ತು ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಲೆಗಳನ್ನ ನಿಗದಿಪಡಿಸಬೇಕು.
ರೈತರು ಮತ್ತು ಕೂಲಿಕಾರರನ್ನು ಸಂಪೂರ್ಣ ಸಾಲದಿಂದ ಮುಕ್ತಗೊಳಿಸಬೇಕು. ಭಾರತವು ವಿಶ್ವ ವ್ಯಾಪಾರ ಒಪ್ಪಂದ ಸಂಸ್ಥೆಯಿಂದ ಹೊರಬರಬೇಕು ಮತ್ತು ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳನ್ನು ನಿಷೇಧಿಸಬೇಕು.
60 ವರ್ಷ ತುಂಬಿದ ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.

ಎಲ್ಲಾ ರಾಜಕೀಯ ಪಕ್ಷಗಳ ಹಗರಣ ತನಿಖೆಯಾಗಲಿ

ಮೈಸೂರಿನ ಮೂಡಾ ಹಗರಣದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಮಾಜಿ, ಹಾಲಿ ಜನಪ್ರತಿನಿಧಿಗಳು ಪಾಲುದಾರರಾಗಿದ್ದು, ಇದು ಸುಮಾರು 5,000 ಕೋಟಿ ರೂಪಾಯಿಗಳ ಹಗರಣವಾಗಿದೆ, ಆದ್ದರಿಂದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದು ರಾಜ್ಯಪಾಲರಿಗೆ ದಾಖಲಾತಿಗಳನ್ನು ನೀಡಿ ಒತ್ತಾಯಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಹೆಚ್.ಸಿ. ಮಂಜುನಾಥ್ (ಕನ್ನಡ ಸಂಘಟನೆ) ಪುರ ಬಿ ಮಹದೇವಪ್ಪ, ಟೌನ್ ಮಹೇಶ್, ಚೋಟ್ಟನಹಳ್ಳಿ ಶಂಕರೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಲಕ್ಷ್ಮಿಪುರ ವೆಂಕಟೇಶ್, ಕಿರಗಸೂರು ಶಂಕರ, ಬರಡನಪುರ ನಾಗರಾಜ್ ಹಾಗೂ ನೀಲಕಂಠಪ್ಪ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ