ಕಳೆದ 4 ದಿನಗಳಿಂದ ಕೊಡಗಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯು ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಭಾರೀ ಪ್ರಮಾಣದ ನೀರು ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಹರಿದು ಬರುತ್ತಿರುದ್ದು, ಕಾವೇರಿ ನದಿ ಸಮೀಪರುವ ಗ್ರಾಮಸ್ಥರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಶುಕ್ರವಾರ ಬೆಳಿಗ್ಗೆಯಿಂದ ಕೆ.ಆರ್.ಎಸ್ ಅಣೆಕಟ್ಟೆ 44,617 ಕ್ಯೂಸೆಕ್ ಒಳ ಹರಿವು ಹರಿದು ಬರುತ್ತಿದ್ದು, ಇದು ಇನ್ನಷ್ಟು ಹೆಚ್ಚಾಗುವ ಸಂಭವಿದೆ. ಅಣೆಕಟ್ಟೆಯ ನೀರಿನ ಮಟ್ಟ ಪ್ರಸ್ತುತ 116.60 ಅಡಿಗೆ ತಲುಪಿದ್ದು, ಜಲಾಶಯ ಭರ್ತಿಗೆ ಕೇವಲ 8 ಅಡಿಯಷ್ಟೇ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಒಂದು ವೇಳೆ ಒಳ ಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಾದಲ್ಲಿ ಅನಿವಾರ್ಯವಾಗಿ ಅಣೆಕಟ್ಟೆಯಿಂದ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡುವ ಸಂಭವವಿದ್ದು ನದಿ ತಟದ ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ.
ಪ್ರವಾಹ ಮುನ್ನೆಚ್ಚರಿಕೆ
ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ 10 ಸಾವಿರ ಕ್ಯೂಸೆಕ್ ನಿಂದ 25 ಸಾವಿರ ಕ್ಯೂಸೆಕ್ ವರೆಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಆದ್ದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ಕೆ.ಆರ್.ಎಸ್ ವಿಭಾಗದ ಕಾರ್ಯಪಾಲಕ ಇಂಜಿಯರ್ ಮನವಿ ಮಾಡಿದ್ದಾರೆ.