Friday, September 20, 2024

ಪ್ರಾಯೋಗಿಕ ಆವೃತ್ತಿ

ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಜನಾಂದೋಲನ ಸಮಾವೇಶ ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಈ ಸಮಾವೇಶದಲ್ಲಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲ ಪಡಿಸಬೇಕೆಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಎಂ.ಎಲ್‌.ಸುರೇಶ್ ಮನವಿ ಮಾಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮುಡಾ ನಿವೇಶನ ವಿಚಾರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸುಳ್ಳು ಹಬ್ಬಿಸುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಯನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಉಗ್ರವಾಗಿ ಖಂಡಿಸುತ್ತದೆ.ಬಿಜೆಪಿ ಹಾಗೂ ಜೆಡಿಎಸ್ ಅಧಿಕಾರದಲ್ಲಿದ್ದಾಗ ಕರ್ನಾಟಕ ರಾಜ್ಯದ ಅಭಿವೃದ್ಧಿಯ ಹಣವನ್ನು ಹಾಗೂ ಸರ್ಕಾರಿ ಆಸ್ತಿಗಳನ್ನು ಲೂಟಿ ಮಾಡಿವೆ‌.ಭ್ರಷ್ಟಾಚಾರದ ಯಾತ್ರೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರವರು ನೇರವಾಗಿ ಆರ್.ಟಿ.ಜಿ.ಎಸ್. ಮೂಲಕ ಲಂಚ ಪಡೆದು ಅವರ ತಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರು ಜೈಲಿಗೆ ಹೋಗಲು ಕಾರಣವಾಗಿದ್ದ, ಇವರು
ಪಾದಯಾತ್ರೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ಪಾದಯಾತ್ರೆ ಆರಂಭಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರಿಗೆ ಕರ್ನಾಟಕದ ನೆರೆ, ಮಳೆಹಾನಿ ನೆನಪಾಗಿತ್ತು.ಅದನ್ನು 24 ಗಂಟೆಯಲ್ಲಿ ಮರೆತು ಹೋಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದ 14 ತಿಂಗಳು ಕುಮಾರಸ್ವಾಮಿಯವರಿಗೆ ಕರ್ನಾಟಕದ ಅಭಿವೃದ್ಧಿಯಲ್ಲಿ ಕಿಂಚಿತ್ತೂ ಕಾಳಜಿ ಇಲ್ಲದೆ ಸ್ವಜನ ಪಕ್ಷಪಾತ ಹಾಗೂ ಕುಟುಂಬದ ಅಭಿವೃದ್ಧಿ ಮುಖ್ಯವಾಗಿತ್ತು.ಅವರಿಗೆ ಏನಾದರೂ ಕಾಳಜಿ ಇದ್ದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಸಮಯದಲ್ಲಿ ಕೇವಲ 5 ನಿಮಿಷದಲ್ಲಿ ಮೇಕೆದಾಟಿಗೆ
ಅನುಮತಿ ಕೊಡಿಸುತ್ತೇವೆಂದು ಹೇಳಿದ್ದರಲ್ಲ,ಅದನ್ನು ಮಾಡಲಿ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಬಗ್ಗೆ ಸುಳ್ಳು ಹಗರಣಗಳನ್ನು ಹೇಳಿಕೊಂಡು ರಾಜ್ಯದ ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸಿ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾದ ಜಿ.ಎಸ್.ಟಿ.
ಹಣವನ್ನು ಕೊಡಿಸಲು ದೆಹಲಿ ಚಲೋ ಹೊರಟರೆ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂದು ಹೇಳಿದರು.

ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಸುಳ್ಳಿನ ಸುದ್ದಿಗಳನ್ನು ಹಬ್ಬಿಸಿಕೊಂಡು ಸಿದ್ದರಾಮಯ್ಯರವರನ್ನು ತೇಜೋವಧೆ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯರವರು ತಮ್ಮ 40 ವರ್ಷಗಳ ಸುದೀರ್ಘ ರಾಜಕೀಯ ಅಧಿಕಾರದಲ್ಲಿ ಒಂದೇ ಒಂದು ಕಪ್ಪುಚುಕ್ಕಿ ಇಲ್ಲದೆ ಆಡಳಿತವನ್ನು ನಡೆಸಿದ್ದಾರೆ. ಆದ್ದರಿಂದ, ನಾವು ರಾಜ್ಯದ ಜನರಿಗೆ ಸತ್ಯವನ್ನು ಹೇಳಲು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಜನಾಂದೋಲನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ವರ್ಗದ ಶೋಷಿತ ವರ್ಗಗಳು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ,ಅಲ್ಪ ಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಕೆಪಿಸಿಸಿ ಸದಸ್ಯೆ ವಿಜಯಲಕ್ಷ್ಮಿ ರಘುನಂದನ್, ಮುಖಂಡರಾದ ಸುಂಡಹಳ್ಳಿ ಮಂಜುನಾಥ್, ರಾಜು, ಹಳುವಾಡಿ‌ ವೆಂಕಟೇಶ್, ಮಹೇಶ್ ಹಾಗೂ ಅಮ್ಜದ್ ಪಾಷ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!