Tuesday, November 24, 2026

ಪ್ರಾಯೋಗಿಕ ಆವೃತ್ತಿ

BMTC ಕಂಡಕ್ಟರ್ ಹುದ್ದೆಗಳ ನೇಮಕಾತಿ| ಮಂಡ್ಯದ 6 ಕೇಂದ್ರಗಳಲ್ಲಿ ಸೆ.1ರಂದು ಪರೀಕ್ಷೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಸೆಪ್ಟೆಂಬರ್ 1 ರಂದು ನಡೆಯಲಿದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 06 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದ್ದು ವ್ಯವಸ್ಥಿತವಾಗಿ ನಡೆಸಿ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕಿ ಡಾ ರೋಹಿಣಿ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಬೆಂಗಳೂರು ಮಹಾನಗರ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10.30 ರಿಂದ 12.30 ಗಂಟೆಗೆ ಪತ್ರಿಕೆ – 1 ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ಪತ್ರಿಕೆ – 2, ಒಟ್ಟು 2 ಪತ್ರಿಕೆಗಳ ಪರೀಕ್ಷೆಯು ನಡೆಯಲಿವೆ. ಪರೀಕ್ಷೆಯಲ್ಲಿ ಯಾವುದೇ ಲೋಪ ದೋಷಗಳು ನಡೆಯಬಾರದು ಎಂದರು.

ಪರೀಕ್ಷೆಯು ಆರಂಭವಾಗುವ 2 ಗಂಟೆ ಮುಂಚೆಯೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ತಮ್ಮ ಆಸನಗಳನ್ನು ಹುಡುಕಿ ಖಾತ್ರಿ ಪಡಿಸಿಕೊಳ್ಳಬೇಕು. ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಸ್ಥಳದಲ್ಲಿ ಕುಳಿತಿರುವುದನ್ನು ಪರಿಶೀಲಸಬೇಕು ಎಂದರು.

ಪರೀಕ್ಷಾ ಸಮಯದಲ್ಲಿ ನಿಶ್ಯಬ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮೇಲ್ವಿಚಾರಕರು, ವೀಕ್ಷಕರು ಅನಗತ್ಯ ವಿಚಾರಗಳನ್ನು ಚರ್ಚಿಸಿ ಅಭ್ಯರ್ಥಿಗಳಿಗೆ ತೊಂದರೆ ಉಂಟುಮಾಡಿದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಸ್ಮಾರ್ಟ್ ವಾಚ್, ಮೊಬೈಲ್, ಇಯರ್ ಫೋನ್ ಮುಂತಾದ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಜೊತೆಗೆ ಜೀನ್ಸ್ ಪ್ಯಾಂಟ್, ತುಂಬು ತೋಳಿನ ಶರ್ಟ್ ಧರಿಸಿ ಬಂದವರಿಗೆ ಪರೀಕ್ಷಾ ಕೇಂದ್ರ ಕೊಠಡಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದರು.

ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಅಭ್ಯರ್ಥಿಗಳ ರಿಜಿಸ್ಟರ್ ಸಂಖ್ಯೆ, ಸಹಿ ಮುಂತಾದ ಅಂಶಗಳನ್ನು ಪರಿಶೀಲಿಸುವುದು. ಒಂದು ಬಾರಿ ಪರೀಕ್ಷಾ ಕೊಠಡಿಗೆ ಪ್ರವೇಶಿಸಿದ ನಂತರ ಪರೀಕ್ಷೆ ಮುಗಿಯುವವರೆಗೂ ಹೊರಗೆ ಹೋಗುವಂತಿಲ್ಲ ಎಂದು ತಿಳಿಸಿದರು.

ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ವನ್ನು ಕಡ್ಡಾಯವಾಗಿ ತರಬೇಕು. ಜೊತೆಗೆ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ತರುವುದು. ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ ಇರಬೇಕು. ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಪರೀಕ್ಷಾ ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಸೆಂಟರ್, ಸೈಬರ್ ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ ಚೆಲುವಯ್ಯ, ಡಿವೈಎಸ್ ಪಿ ಎಲ್ ಕೆ ರಮೇಶ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್ ಆಶಾಲತಾ ಸೇರಿದಂತೆ ವಿವಿಧ ಕಾಲೇಜಿನ ಪರೀಕ್ಷಾ ಕೇಂದ್ರಗಳ ಪ್ರಾಚಾರ್ಯರು, ವೀಕ್ಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ