Friday, October 18, 2024

ಪ್ರಾಯೋಗಿಕ ಆವೃತ್ತಿ

ಕಾಲಮಿತಿಯಲ್ಲಿ 34,863 ಹುದ್ದೆಗಳ ನೇಮಕಾತಿ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ವಿಧಾನಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೇರಳ ಮಾದರಿಯಲ್ಲಿ ನೇಮಕಾತಿ ಪರಿಶೀಲನೆ

ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು. ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು

ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕೆಂದರು.

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು. ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕೆಂದು ಸೂಚಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!