ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಮಂಡ್ಯ ಎಫ್ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಂಡ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರಣ ಸಬಲೀಕರಣ ಇಲಾಖೆ ಇವರುಗಳ ಸಹಯೋಗದೊಂದಿಗೆ ನಡೆದ ‘ವಿಧಾನ್ ಸಮಾಧಾನ್ ‘ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗಾಗಿ ಬಹಳಷ್ಟು ಕಾನೂನುಗಳು, ಕಾಯ್ದೆಗಳು ಇವೆ. ಅವುಗಳನ್ನು ಪ್ರತಿಯೊಬ್ಬ ಮಹಿಳೆಯರು ಅರಿತು ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ತಿಳಿಯಬೇಕು ಎಂದರು.
ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ಬಹಳ ಮುಂದಿದ್ದು, ಸಮಾಜದಲ್ಲಿ ಉತ್ತಮ ಬೆಳವಣಿಗೆ ಆಗುತ್ತಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿದರೆ ಇಡೀ ಸಮಾಜವೇ ಬೆಳವಣಿಗೆ ಹೊಂದುತ್ತದೆ. ಕಾರ್ಯಗಾರದಲ್ಲಿ ಮಹಿಳೆಯರ ಭಾಗವಹಿಸುವಿಕೆ ಮುಖ್ಯವಾಗಿದ್ದು, ಕಾರ್ಯಗಾರದ ಉದ್ದೇಶವನ್ನು ತಿಳಿದುಕೊಳ್ಳಬೇಕು ಎಂದರು.
ಲೈಂಗಿಕ ದೌರ್ಜನ್ಯ ಕಾಯ್ದೆ, ಅತ್ಯಾಚಾರ, ಅಪಹರಣ ಮುಂತಾದ ವಿಷಯಗಳಿಗೆ ಸಂಬಂಧಿಸಿದ ಕಾನೂನು ಕಾಯ್ದೆಗಳ ಬಗ್ಗೆ ನುರಿತ ವ್ಯಕ್ತಿಗಳಿಂದ ಕಾರ್ಯದಲ್ಲಿ ತಿಳಿಸಲಾಗುತ್ತದೆ. ಇದರ ಸದುಪಯೋಗ ಪಡೆದುಕೊಂಡು ನಿಮ್ಮ ಸುತ್ತಮುತ್ತಲಿನ ಜನರುಗಳಿಗೆ ತಿಳಿಸುವ ಕೆಲಸ ಮಾಡಿ ಎಂದರು.
ಸಮಾಜವನ್ನು ಸುಸ್ಥಿತಿಯಲ್ಲಿಡಲು ಹೆಣ್ಣು ಮಕ್ಕಳ ಸಹಕಾರ ಮುಖ್ಯ
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅವರು, ಸಮಾಜವನ್ನು ಸುಸ್ಥಿತಿಯಲ್ಲಿಡಲು ಹೆಣ್ಣು ಮಕ್ಕಳು ಸಹಕರಿಸಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಹೆಣ್ಣು ಬುದ್ದಿವಂತೆಯಾಗಿ ಬದುಕಿದರೆ ಮಾತ್ರ ಸಮಾಜ, ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ. ಭಾರತೀಯ ಸಮಾಜ ಎಲ್ಲಾ ರೀತಿಯಲ್ಲಿಯೂ ಮಹಿಳೆಯರಿಗೆ ಗೌರವ ನೀಡುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಕಾನೂನು ಮತ್ತು ಕಾನೂನು ವ್ಯವಸ್ಥೆ ಯಾವ ಸಮಾಜದಲ್ಲಿ ಅರ್ಥಪೂರ್ಣವಾಗಿರುತ್ತದೋ ಅಂತಹ ಸಮಾಜದ ಜನಗಳು ಕಷ್ಟಕ್ಕೆ ಸಿಲುಕುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಾರ್ಯಾಗಾರದಲ್ಲಿ ಕಾನೂನಿನ ಅರಿವಿನ ಲಾಭ ಪಡೆದು ತದನಂತರ ಬೇರೆಯವರಿಗೆ ತಿಳಿಸಬೇಕು. ಶಕ್ತಿಪೂರ್ವಕ ಸಮಾಜದಲ್ಲಿ ಶಕ್ತಿ ತುಂಬಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರ ಆನಂದ. ಎಂ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಮೊದಲನೇ ಬಾರಿಗೆ ಈ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಮಹಿಳೆಯರು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.
ಅಪರ ಪೊಲೀಸ್ ವರಿಷ್ಠಾಧಿಕಾರಿ ಎಸ್.ಸಿ. ಗಂಗಾಧರಸ್ವಾಮಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಜಾಗೃತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೋಲಿಸ್ ಇಲಾಖೆಗಳಲ್ಲಿ ದಾಖಲಾಗುವ ಅಪಘಾತ ಪ್ರಕರಣಗಳಲ್ಲಿ ಶೇ. 1 ಕ್ಕಿಂತ ಕಡಿಮೆ ಇದೆ. ಕಾನೂನು ಪಾಲನೆಯಲ್ಲಿ ಹೆಣ್ಣು ಮಕ್ಕಳು ಮುಂದಿದ್ದಾರೆ ಎಂದು ತಿಳಿಸಿದರು.
ಮಂಡ್ಯ ವಕೀಲರ ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿ ಎಂ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್. ರಾಜಮೂರ್ತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್ ಮತ್ತಿತರರಿದ್ದರು.




