Friday, October 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಾತಿಗಣತಿ ವರದಿ ಜಾರಿಗೆ ಶೋಷಿತರ ಮಹಾಒಕ್ಕೂಟ ಆಗ್ರಹ

ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ (ಜಾತಿ ಗಣತಿ) ನಡೆಸಿ ತಯಾರಿಸಲಾಗಿರುವ ಸಮೀಕ್ಷಾವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುವ ಅಗತ್ಯವಿಲ್ಲ. ಸುಮಾರು 159 ಕೋಟಿ ರೂ ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದವಾಗಿ ಜಾರಿಗೆ ಬರಬೇಕೆಂದು ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು.

ಮಂಡ್ಯ ಜಿಲ್ಲಾ ಶೋಷಿತರ ಸಮುದಾಯಗಳ ಮಹಾ ಒಕ್ಕೂಟದ ಮುಖಂಡರಾದ ಕೆ.ಹೆಚ್.ನಾಗರಾಜು, ವಿಜಯಲಕ್ಷ್ಮಿ ರಘುನಂದನ್, ಸುರೇಶ್, ಸುಂಡಹಳ್ಳಿ ಮಂಜುನಾಥ್, ಅಮ್ಜದ್ ಪಾಷ, ದೊಡ್ಡಯ್ಯ ಹಾಗೂ ನರಸಿಂಹಮೂರ್ತಿ ಸೇರಿದಂತೆ ಮತ್ತಿತರರು ಮನವಿ ಸಲ್ಲಿಸಿ, ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸ್ವಾಗತಾರ್ಹ, ಅದರಂತೆ ವರದಿ ಜಾರಿಗೊಳಿಸಲು ಎಂದು ಆಗ್ರಹಿಸಿದರು.

ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾ ವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ ಎಂದರು.

ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.

ಮೀಸಲಾತಿ ಪರಿಷ್ಕರಣೆ, ಜಾತಿಗಳನ್ನು ಹೊಸ ವರ್ಗಕ್ಕೆ ಸೇರಿಸುವುದು ಅಥವಾ ಕೈಬಿಡುವುದು ಎಲ್ಲಕ್ಕೂ ಸುಪ್ರೀಂ ಕೋರ್ಟ್ ಯಾವುದಾದರೂ ಸಾಂವಿಧಾನಿಕ ಸ್ಥಾನಮಾನ ಇರುವ ಆಯೋಗದ ದತ್ತಾಂಶವನ್ನು ಕೇಳುತ್ತದೆ. ಇದು ಮಂಡಲ್ ವರದಿ ಅನುಷ್ಠಾನವನ್ನು ಪ್ರಶ್ನಿಸಿದ್ದ ಅರ್ಜಿಯಿಂದ ಹಿಡಿದು ಹಲವಾರು ಪ್ರಕರಣಗಳಲ್ಲಿ ಕಂಡು ಬಂದಿದೆ. ಆದುದರಿಂದ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡು ಬಿಡುಗಡೆ ಮಾಡಬೇಕಾಗಿರುವುದು ಅತ್ಯಾವಶ್ಯಕವಾಗಿದೆ ಎಂದರು.

ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇರುವ ಸದಾ ಸಾಮಾಜಿಕ ನ್ಯಾಯದ ಪರ ಇರುವ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ಅವರು ರಾಜ್ಯದ ಏಳು ಕೋಟಿ ಜನರಿಗೂ ಅನುಕೂಲ ಆಗುವಂತಹ ಈ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸುವುದಾಗಿ ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು. ಕೊಟ್ಟ ಮಾತಿನಂತೆ ಈಗ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಿ ‘ನಾವು ನಡೆದಂತೆ ನಡೆಯುವವರು’ ಎನ್ನುವುದನ್ನು ಸಾಬೀತು ಮಾಡಬೇಕೆಂದು ಆಗ್ರಹಿಸಿದರು.

ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಮಂಡಿಸಿದಾಗ ಕೆಲವರು ಆಕ್ಷೇಪ ಎತ್ತಿ ಅದನ್ನು ಒಪ್ಪಬೇಕೋ-ಬೇಡವೋ ಎಂದು ನಿರ್ಧರಿಸುವ ಅಭಿಪ್ರಾಯ ಸಂಪುಟ ಸಭೆಯ ಅಧಿಕಾರ. ಆದರೆ ಸಂಪುಟ ಸಭೆಯಲ್ಲಿ ಮಂಡಿಸಬಾರದು ಎಂಬುದು ಗೂಂಡಾ ಪ್ರವೃತ್ತಿ. ಸರ್ವಾಧಿಕಾರಿ ಧೋರಣೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಇಂತಹ ಜೊಳ್ಳು ಬೆದರಿಕೆಗೆ ತಲೆ ಕೆಡಿಸಿಕೊಳ್ಳದೆ ಮಾನ್ಯ ಸಿದ್ದರಾಮಯ್ಯ ನವರು ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಒತ್ತಾಯಿಸಿದರು.

ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆಗಾಗಿ ಒತ್ತಾಯಿಸಿ ದಿನಾಂಕ 16 ಅಕ್ಟೋಬರ್ 2024 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ ಆಯೋಜಿಸುತಿದ್ದೇವೆ. ಈ ಸಮಾವೇಶದಲ್ಲಿ ನಾಡಿನ ಶೋಷಿತ ಸಮುದಾಯಗಳ ಜನತೆ, ಸಂಘ ಸಂಸ್ಥೆಗಳು, ಭಾಗವಹಿಸುತ್ತೇವೆ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!