Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕರ್ನಾಟಕದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಾರಾಷ್ಟ್ರದಲ್ಲಿ ಸುಳ್ಳಿನ ಜಾಹೀರಾತು| ಮೋದಿ ಕ್ಷಮೆಯಾಚನೆಗೆ ಸಿದ್ದರಾಮಯ್ಯ ಒತ್ತಾಯ

‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘’ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ ಹಾಕಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈ ವರೆಗೆ 1.22 ಕೋಟಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಸಂದಾಯವಾಗುತ್ತಿದೆ. ಈ ರೀತಿ ಒಟ್ಟು ₹30,285 ಕೋಟಿ ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ ಎಂದು ಚಾಟಿ ಬೀಸಿದ್ದಾರೆ.

ದೇಶದ ಜನತೆಯ ಕ್ಷಮೆ ಯಾಚಿಸಿ

ಪ್ರಧಾನಿ ನರೇಂದ್ರ ಮೋದಿಯವರೇ, ಇದು ನಿಮ್ಮ ಸುಳ್ಳಿನಿಂದಲೇ ಪ್ರೇರಣೆ ಪಡೆದು ಹೇಳಿರುವ ಸುಳ್ಳಾಗಿರುವ ಕಾರಣ ದಯವಿಟ್ಟು ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಹೇಳಿರುವ ಸುಳ್ಳಿಗಾಗಿ ದೇಶದ ಜನತೆಯ ಕ್ಷಮೆ ಯಾಚಿಸಿ, ಸತ್ಯಸಂಗತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ತಾನು ಪ್ರಕಟಿಸಿರುವ ಸುಳ್ಳಿನ ಜಾಹೀರಾತಿನಷ್ಟೇ ಗಾತ್ರದ ಜಾಹೀರಾತಿನಲ್ಲಿ ಸತ್ಯ ಸಂಗತಿಯನ್ನು ತಿಳಿಸಿ ಅಲ್ಲಿನ ಎಲ್ಲ ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ನಮ್ಮ ಸರ್ಕಾರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ