ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳಮೀಸಲಾತಿ ಜಾರಿ ಮಾಡುವ ದಿಕ್ಕಿನಲ್ಲಿ ಕರ್ನಾಟಕ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಸ್ವಾಗತಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸಚಿವ ಸಂಪುಟ ಒಳ ಮೀಸಲಾತಿಯನ್ನು ವರದಿಯಂತೆ ಜಾರಿಮಾಡದೆ ದತ್ತಾಂಶ ಸಂಗ್ರಹಣೆ ನೆಪವೊಡ್ಡಿ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನಾವಶ್ಯಕ ಮತ್ತು ಕಾಲಹರಣದ ತಂತ್ರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಾವನೂರು ಆಯೋಗದಿಂದ ಮೊದಲ್ಗೊಂಡು ನ್ಯಾಯಮೂರ್ತಿ ಸದಾಶಿವ ಆಯೋಗ, ಕಾಂತರಾಜ ಅಯೋಗ ಹಾಗೂ ಜೆ.ಸಿ.ಮಾಧುಸ್ವಾಮಿ ಸಮಿತಿಗಳು ನೀಡಿರುವ ವರದಿಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಜಾತಿಗಳ ಜನಸಂಖ್ಯೆಗೆ ಸಂಬಂಧಿಸಿದ ಮಾಹಿತಿ ಲಭ್ಯವಿದ್ದು, ಇದನ್ನು ಪರಿಗಣಿಸಿ ಒಳಮೀಸಲಾತಿಯನ್ನು ವಿಳಂಬ ಮಾಡದೆ ಕೂಡಲೇ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ, ಪಂಗಡದಂತೆ ಅತಿ ಹಿಂದುಳಿದ ವರ್ಗಗಳಿಗೆ ಕರ್ನಾಟಕದಲ್ಲಿ ಮೀಸಲಾತಿಯ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಅದಕಾರಣ ಮೇಲ್ದಾತಿಗಳ ಒತ್ತಡಕ್ಕೆ ಮಣಿಯದ ರಾಜ್ಯ ಸರ್ಕಾರವು ಕಾಂತರಾಜ ವರದಿಯನ್ನು ತಕ್ಷಣದಿಂದ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ, ರಾಜ್ಯ ಸಂಯೋಜಕ ಆರ್.ಮುನಿಯಪ್ಪ , ಆನಂದ , ಅನಿಲ್ ಕುಮಾರ್ ಇನ್ನಿತರರಿದ್ದರು.




