ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಸೂಕ್ತವಾದ ವಿಶಾಲವಾದ ಹಾಗೂ ಸುರಕ್ಷಿತವಾದ ಸ್ಥಳದ ಅಗತ್ಯವಿದ್ದು, ಅದಕ್ಕಾಗಿ ಹಲವಾರು ಸ್ಥಳಗಳನ್ನು ಪರಿಶೀಲಿಸಲಾಗಿದೆ. ಜೊತೆಗೆ ಸ್ಥಳ ಪರಿಶೀಲನೆಗೆ ತಾಂತ್ರಿಕ ಪರಿಣಿತರ ತಂಡದ ಮೂಲಕ ಜಾಗಗಳ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಂಡು, ಅಂತಿಮವಾಗಿ ಮಂಡ್ಯ ಹೊರವಲಯದ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ನ ಹಿಂಭಾಗದ ಜಾಗವನ್ನು ತಾಂತ್ರಿಕ ವರದಿಯನ್ವಯ ಅಂತಿಮಗೊಳಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇತ್ತೀಚೆಗೆ ಮಂಡ್ಯದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಕರ್ನಾಟಕದ ಸಂಘದ ಪ್ರೊ.ಜಯಪ್ರಕಾಶ್ ಗೌಡ ನೇತೃತ್ವದಲ್ಲಿ ಸಭೆ ನಡೆಸಿ, ಮಂಡ್ಯನಗರದಲ್ಲಿಯೇ ಸಮ್ಮೇಳನ ಆಯೋಜಿಸಬೇಕು ಎಂಬ ನಿರ್ಣಯ ಅಂಗೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಷಿ ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ, ಸ್ಥಳದ ಆಯ್ಕೆ ನನ್ನ ನಿರ್ಧಾರವಲ್ಲ, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಿತಿಗಳ ಆಯ್ಕೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.
ಈ ಎಲ್ಲಾ ಬೆಳವಣಿಗೆ ನಂತರ ಸಚಿವ ಚಲುವರಾಯಸ್ವಾಮಿ ಮಾಧ್ಯಮ ಪ್ರಕಟಣೆ ನೀಡಿದ್ದು, ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಜಾಗವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ.
ಕನ್ನಡದ ಐಕ್ಯತೆಯ ದ್ಯೋತಕವಾಗಿ ನಮ್ಮ ಸಾಹಿತ್ಯ -ಸಂಸ್ಕೃತಿ-ಪರಂಪರೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸುತ್ತಾ ಬರಲಾಗಿದೆ. ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಜನಮನದಲ್ಲಿ ನದಾ ಕಾಲ ಚೈತನ್ಯಶೀಲವಾಗಿಡಲು ಇದು ಸಹಕಾರಿಯಾಗಿದೆ. ಅತಿ ಹೆಚ್ಚು ಕನ್ನಡ ಮಾತನಾಡುವ ಜನರಿರುವ ಖ್ಯಾತಿ ಇರುವ ನಮ್ಮ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್ 20, 21 ಮತ್ತು 22ರಂದು ಆಚರಿಸುವ ಅವಕಾಶ ಲಭಿಸಿರುವುದು ನಾವೆಲ್ಲರೂ ಸಂಭ್ರಮಿಸಬೇಕಾದ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಸಮ್ಮೇಳನ ಸಂಘಟನೆಗಾಗಿ ಸಾಕಷ್ಟು ಕಾರ್ಯಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸುವ ದೃಷ್ಟಿಯಲ್ಲಿ 28 ಸಮಿತಿಗಳನ್ನು ರಚಿಸಿದ್ದು, ಎಲ್ಲಾ ಸಮಿತಿಗಳ ಅಧ್ಯಕ್ಷತೆಯನ್ನು ಜಿಲ್ಲೆಯ ಎಲ್ಲಾ ಶಾಸಕರು ವಹಿಸಿಕೊಂಡು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವುದು ಮತ್ತಷ್ಟು ಮೆರಗು ತಂದಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಮನ್ವಯದೊಂದಿಗೆ ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯ ಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನಕ್ಕೆ ಸ್ಥಳ ಅಯ್ಕೆಗೆ ಸಂಬಂಧಿಸಿದಂತೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸೂಕ್ತವಾದ ಜಾಗವನ್ನು ಆಯ್ಕೆ ಮಾಡುವ ಸಂಬಂಧ ಕಾರ್ಯ ಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿರುತ್ತದೆ ಹಾಗೂ ವಿವಿಧ ಸಮಿತಿಗಳ ಸದಸ್ಯರು, ಶಾಸಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನೊಟ್ಟಿಗೆ ಸಾಕಷ್ಟು ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.
ಇದೇ ಡಿಸೆಂಬರ್ 20, 21 ಮತ್ತು 22ರಂದು ಆಚರಿಸುವ ನುಡಿ ಜಾತ್ರೆಯು ಬರಿ ನಾಡಿನ ಹಬ್ಬವಲ್ಲ ನಮ್ಮ ಮನೆ ಮನೆಯ ಹಬ್ಬವಾಗಬೇಕು. ಎಲ್ಲರೂ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21 ಮತ್ತು 22ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮತ್ತಷ್ಟು ಮೆರುಗನ್ನು ತರಬೇಕು ಎಂಬುದೇ ಆಶಯ ಎಂದು ಅವರು ತಿಳಿಸಿದ್ದಾರೆ.





