Friday, November 20, 2026

ಪ್ರಾಯೋಗಿಕ ಆವೃತ್ತಿ

ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ | ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಬಗ್ಗೆ ಪರಿಶೀಲನೆಯಲ್ಲಿದೆ : ಡಾ.ಸುಧಾಕರ್

‘ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ಕಲ್ಪಿಸಲು ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಬಗ್ಗೆ ಪರಿಶೀಲನೆಯಲ್ಲಿ ಇರುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಬೆಳಗಾವಿ ವಿಧಾನ ಪರಿಷತ್ತಿನಲ್ಲಿ ಸೋಮವಾರ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ (ಅತಿಥಿ ಉಪನ್ಯಾಸಕರ ವಂತಿಗೆ ಮಾಸಿಕ ರೂ. 400 ಹಾಗೂ ಸರ್ಕಾರದಿಂದ ರೂ. 400 ಸೇರಿದಂತೆ ಒಟ್ಟು ರೂ. 800) ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸಲು ಈಗಾಗಲೇ ಮಂಜೂರಾತಿ ನೀಡಲಾಗಿದ್ದು, ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಹಾಗೇ, 60 ವರ್ಷ ಮೀರಿದ ಅತಿಥಿ ಉಪನ್ಯಾಸಕರಿಗೆ ಭದ್ರತಾ ರೂಪದಲ್ಲಿ ವಾರ್ಷಿಕ ರೂ. 50 ಸಾವಿರದಂತೆ ಗರಿಷ್ಠ ರೂ. 5 ಲಕ್ಷ ಇಂಡಿಗಂಟು ಸೌಲಭ್ಯ ನೀಡಲಾಗುತ್ತಿದೆ. 2024ನೇ ಸಾಲಿಗೆ ಅನ್ವಯಿಸುವಂತೆ ಸುಮಾರು 27 ಅತಿಥಿ ಉಪನ್ಯಾಸಕರು ವಯೋನಿವೃತ್ತಿ ಹೊಂದಲಿದ್ದಾರೆ. ಸದರಿರವರಿಗೆ ಇಡಿಗಂಟು ಯೋಜನೆಯನ್ನು ಜಾರಿಗೊಳಿಸಲು ಗರಿಷ್ಠ ರೂ. 135 ಲಕ್ಷಗಳ ಅನುದಾನ ಅವಶ್ಯವಿದ್ದು, ಈ ಅನುದಾನದ ಲಭ್ಯತೆ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದಿದ್ದಾರೆ.

ಅತಿಥಿ ಉಪನ್ಯಾಸಕರು ಕರ್ತವ್ಯದ ಅವಧಿಯಲ್ಲಿ ಮೃತಪಟ್ಟರೆ ಅವರ ಅವಲಂಬಿತರಿಗೆ ಯಾವುದೇ ಸೌಲಭ್ಯಗಳನ್ನು ನೀಡಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

34,509 ಅರ್ಜಿ

2024-25ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆಗೆ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಿದ್ದು ಒಟ್ಟು 34,509 ಅರ್ಜಿಗಳು ಸ್ವೀಕೃತವಾಗಿವೆ.

ಅತಿಥಿ ಉಪನ್ಯಾಸಕರನ್ನು ನೇಮಿಸಬೇಕಿರುವ ಒಟ್ಟು 40 ವಿಷಯಗಳ ಪೈಕಿ 30 ವಿಷಯಗಳಿಗೆ ಅವಶ್ಯವಿರುವ ಸಂಖ್ಯೆಯ ಅಭ್ಯರ್ಥಿಗಳು ಯು.ಜಿ.ಸಿ. ನಿಗದಿತ ಅರ್ಹತಾ ಮಾನದಂಡಗಳನ್ನು ಹೊಂದಿದ್ದಾರೆ. ಉಳಿದ 10 ವಿಷಯಗಳಿಗೆ ಯು.ಜಿ.ಸಿ. ನಿಗದಿತ ಅರ್ಹತಾ ಮಾನದಂಡಗಳನ್ನು ಹೊಂದಿರುವ 1,370 ಅಭ್ಯರ್ಥಿಗಳ ಕೊರತೆ ಇದೆ. ಇಷ್ಟೂ ವಿಷಯಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಲಭ್ಯವಾಗುವವರೆಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸ್ನಾತಕೋತ್ತರ ಪದವಿಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನೇ ಅತಿಥಿ ಉಪನ್ಯಾಸಕರನ್ನಾಗಿ ನೇಮಿಸಿಕೊಳ್ಳುವ ಬಗ್ಗೆ ಪರಿಶೀಲಿಸಿಲಾಗುವುದು ಎಂದಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ