ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು,ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಏಮ್ಸ್ ಆಸ್ಪತ್ರೆಯತ್ತ ಕಾಂಗ್ರೆಸ್ ನಾಯಕರ ದೌಡಾಯಿಸಿದ್ದು, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಅಂತಿಮ ದರ್ಶನಕ್ಕೆ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಯಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.ಮನಮೋಹನ್ ಸಿಂಗ್ ಅವರು ದೇಶದ ಹಣಕಾಸು ಸಚಿವರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. 1991ರಲ್ಲಿ ಪಿ.ವಿ ನರಸಿಂಹ ರಾವ್ ಅವರ ಸರ್ಕಾರದಲ್ಲಿ ಮೊದಲ ಬಾರಿಗೆ ವಿತ್ತ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದರು.
2004 ರಿಂದ 2014ರವರೆಗೂ ಭಾರತದ ಪ್ರಧಾನಮಂತ್ರಿಯಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಕಳೆದ ಏಪ್ರಿಲ್ ತಿಂಗಳಲ್ಲಿ ಮನಮೋಹನ್ ಸಿಂಗ್ ಅವರು ರಾಜ್ಯಸಭಾ ಸದಸ್ಯ ಸ್ಥಾನದಿಂದ ನಿವೃತ್ತಿ ಪಡೆದುಕೊಂಡಿದ್ದರು.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ರದ್ದು
ಮಾಜಿ ಪ್ರಧಾನಿ ಅರ್ಥಶಾಸ್ತ್ರ ತಜ್ಞ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ರದ್ದು ಮಾಡಿರುವ ಕಾಂಗ್ರೆಸ್ ಮುಖಂಡರು ದೆಹಲಿಯತ್ತ ಪಯಣ ಬೆಳೆಸಿದ್ದಾರೆ.
ನಾಳೆ ಸರ್ಕಾರಿ ರಜೆ
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ನಾಳೆ ಡಿ. 27 (ಶುಕ್ರವಾರ)ರಂದು ಸರ್ಕಾರಿ ರಜೆ ಘೋಷಿಸಲಾಗಿದ್ದು, ಎಲ್ಲ ಶಾಲೆ ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.




