‘ಮಕ್ಕಳ ರಕ್ಷಣೆ ಸೇರಿದಂತೆ ಅವರಿಗೆ ಗುಣಾತ್ಮಕ ಶಿಕ್ಷಣದ ಬಗ್ಗೆ ಅರಿವು ಮೂಡಿಸುವುದು ಅಧಿಕಾರಿಗಳಿಗೆ ಮುಖ್ಯವಾಗಬೇಕು’ ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಸಲಹೆ ನೀಡಿದರು.
ಮಂಡ್ಯ ನಗರದ ಡಯಟ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ’ ಮತ್ತು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಕುಮಾರ ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ಹಾಗೂ ಬಡಮಕ್ಕಳಿಗೆ ಆರ್‌ಟಿಇ ಸೌಲಭ್ಯ ಹೆಚ್ಚು ಅನುಕೂಲವಾಗಲಿದೆ. ಇದರಿಂದ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದಂತಾಗಿದೆ. ಆರ್‌ಟಿಇ ಕಾಯ್ದೆಯು ಎಲ್ಲಾ ದೃಷ್ಟಿಕೋನದಿಂದಲೂ ವರದಾನವಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ಅನಂದ್, ಡಿಡಿಪಿಐ ಶಿವರಾಮೇಗೌಡ, ಎಸ್ಪಿ ಗಂಗಾಂಧರ ಸ್ವಾಮಿ, ಡಯಟ್ ಪ್ರಾಂಶುಪಾಲ ಪುರುಷೋತ್ತಮ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್. ರಶ್ಮಿ, ಮಕ್ಕಳ ರಕ್ಷಣಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.




