ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣವನ್ನು ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಮುಖವಾಡಕ್ಕೆ ಸಗಣಿ ಬಳಿದು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಪೋಲಿಸರು ತಡೆಯಲು ಮುಂದಾದಾಗ ಪ್ರತಿಭಟನಾಕಾರರು ಮತ್ತು ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಹಸುವಿನ ಕೆಚ್ಚಲು ಕತ್ತರಿಸಿರುವ ಪ್ರಕರಣದಲ್ಲಿ ದೊಡ್ಡ ಗ್ಯಾಂಗ್ ಕೈವಾಡವಿದೆ ಆದರೆ ಪೊಲೀಸ್ ಇಲಾಖೆ ಒಬ್ಬ ವ್ಯಕ್ತಿಯನ್ನು ಬಂಧಿಸಿ ಕಸ್ಟಡಿಗೂ ಪಡೆಯದೆ ಏಕಾಏಕಿ ಜೈಲಿಗಟ್ಟಿರುವುದು ಹಲವು ಅನುಮಾನ ಮೂಡಿಸುತ್ತಿದೆ,ಕೃ ತ್ಯದಲ್ಲಿ ಭಾಗಿಯಾಗಿರುವ ಎಲ್ಲಾ ದುರುಳರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಡಳಿತ ದಲ್ಲಿದ್ದಾಗ 15 ಜಿಲ್ಲೆಗಳಲ್ಲಿ ಗೋ ಶಾಲೆ ಪ್ರಾರಂಭಿಸಿತ್ತು ಆದರೆ ಕಾಂಗ್ರೆಸ್ ಸರ್ಕಾರಬಹು ಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುವ ಉದ್ದೇಶದಿಂದ ಗೋ ಶಾಲೆಗಳಿಗೆ ಅನುದಾನ ಕಡಿತಗೊಳಿಸಿ ಅದರ ಮೂಲ ಉದ್ದೇಶಗಳಿಗೆ ತೊಂದರೆಕೊಡುವ ಮೂಲಕ ಗೋ ಶಾಲೆಗಳನ್ನು ಮುಚ್ಚಲು ಹೊರಟಿರುವುದು ರಾಜ್ಯದ ಮತದಾರರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ 1.19 ಕೋಟಿ ಜಾನುವಾರುಗಳಿದ್ದು, ಇವುಗಳ ಸಂರಕ್ಷಣೆ ಮಾಡಲು ಮತ್ತು ಹಾಲು ಉತ್ಪಾದಕರಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ಸಾಕಷ್ಟು ಪುರಸ್ಕೃತ ಯೋಜನೆಗಳನ್ನು ರೂಪಿಸಿದೆ. ಇಂತಹ ಯೋಜನೆಗಳನ್ನು ಅನುಷ್ಠಾನ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ, ಆದರೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.
ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಮ್, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಕಾರ್ಯದರ್ಶಿ ಆನಂದ್, ನಾಗಮಂಗಲ ನರಸಿಂಹಮೂರ್ತಿಗೌಡ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್ ಆರ್. ಅಶೋಕ್, ಡಾ.ಸಿದ್ದರಾಮಯ್ಯ, ರಮೇಶ್ ವಿಶ್ವಕರ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




