Thursday, November 19, 2026

ಪ್ರಾಯೋಗಿಕ ಆವೃತ್ತಿ

ನುಡಿ ಜಾತ್ರೆ ಯಶಸ್ವಿ | ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರಿಗೆ ನಾಗರೀಕ ಅಭಿನಂದನೆ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತ ಪೂರ್ವ ಯಶಸ್ಸಿಗೆ ಕಾರಣಕರ್ತರಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ ಮತ್ತು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜನವರಿ 26ರಂದು ಸಂಜೆ 6 ಗಂಟೆಗೆ ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಾಜಿ ಶಾಸಕ ಹಾಗೂ ಸಮಿತಿಯ ಪೋಷಕ ಜಿ.ಬಿ.ಶಿವಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕಾರಣರಾದ ಮಂಡ್ಯ ಜಿಲ್ಲೆಯ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ, ಶಾಸಕರು, ಕಸಾಪ ಸಂಚಾಲಕರಾಗಿದ್ದ ಡಾ.ಮೀರಾಶಿವಲಿಂಗಯ್ಯ, ಜಿಲ್ಲಾಧಿಕಾರಿ, ಜಿ.ಪಂ.ಸಿಇಓ, ಎಸ್ಪಿ ಸೇರಿದಂತೆ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ನಮ್ಮ ಜವಾಬ್ದಾರಿ ಮೆರೆಯುವ ಕಾರ್ಯಕ್ರಮ ಇದಾಗಿದೆ ಎಂದರು.

ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಬಿ.ರಾಮು ಮಾತನಾಡಿ, ಅಭಿನಂದನಾ ಸಮಾರಂಭ ಮತ್ತು ರಸಸಂಜೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ, ಸಮ್ಮೇಳನ ಯಶಸ್ಸಿಗೆ ಕಾರಣರಾದ ಜಿಲ್ಲೆಯ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ, ಶಾಸಕರು, ಜಿಲ್ಲಾಡಳಿತ ಮತ್ತು ಕಸಾಪ ಪ್ರಮುಖರನ್ನು ಸನ್ಮಾನಿಸುವರು ಎಂದು ಹೇಳಿದರು.

ಅಭಿನಂದನಾ ಕಾರ್ಯಕ್ರಮದ ನಂತರ ಖ್ಯಾತ ಗಾಯಕರಾದ ಹೇಮಂತ್, ಶಮಿತಾ ಮಲ್ನಾಡ್ ಮತ್ತು ಹರ್ಷ ತಂಡದಿಂದ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ನಡೆಯುವ ಈ ಕಾರ್ಯಕ್ರಮಕ್ಕೆ ನಾಗರೀಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎ.ಸಿ.ರಮೇಶ್ ಮಾತನಾಡಿ, ಕೇಂದ್ರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರ ನಡವಳಿಕೆ ಬಗ್ಗೆ ಹಲವು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಮೂಡಿ ಚರ್ಚೆಯಾಗಿದ್ದು, ಸಮ್ಮೇಳನದ ಯಶಸ್ಸಿಗೆ ಅವರೂ ದುಡಿದ ಕಾರಣಕ್ಕೆ ಅವರನ್ನು ಸ್ವಾಗತಿಸಲಾಗುವುದು. ಆದರೆ ಅವರಿಗೆ ಯಾವುದೇ ರೀತಿಯ ಆಹ್ವಾನ ಪತ್ರ ನೀಡಲಾಗುವುದಿಲ್ಲ. ಕರೆ ಮೂಲಕ ಆಹ್ವಾನ ಮಾಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಗೋಷ್ಠಿಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಎಚ್.ಪಿ.ಶಶಿಕುಮಾರ್, ಉಪಾಧ್ಯಕ್ಷ ಕಂಬದಹಳ್ಳಿ ಪುಟ್ಟಸ್ವಾಮಿ, ಪ್ರಧಾನ ಸಂಚಾಲಕ ತಗ್ಗಹಳ್ಳಿ ವೆಂಕಟೇಶ್, ಖಜಾಂಚಿ ತ್ಯಾಗರಾಜು, ಪ್ರಧಾನ ಕಾರ್ಯದರ್ಶಿ ಕೀಲಾರ ಕೃಷ್ಣೇಗೌಡ, ಪ್ರದೀಪ್‌ಕುಮಾರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ