ವರದಿ : ಪ್ರಭು ವಿ ಎಸ್
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇದ್ರಸ್ವಾಮಿ ಅವರನ್ನು ಜಿ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ದಲಿತ ಸಂಘಟನೆಯ ಪದಾಧಿಕಾರಿಗಳು ಅಭಿನಂದಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸ್ಥಳೀಯ ಮುಖಂಡರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಬಳಿಕ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ತಮ್ಮ ಕಾರ್ಯಸೂಚಿ ಮತ್ತು ಉದ್ದೇಶಗಳನ್ನು ಸವಿಸ್ತಾರವಾಗಿ ಮುಂದಿನ ದಿನಗಳಲ್ಲಿ ತಿಳಿಸಲಿದ್ದು ಕಾರ್ಯದೊತ್ತಡ ನಿಮಿತ್ತ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲವೆಂದರು.

ಪಕ್ಷದ ಹೈಕಮಾಂಡ್ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ತಮ್ಮನ್ನು ಸಮಾಧಾನಗೊಳಿಸಲು ನಿಗಮ ಮಂಡಳಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಮ್ಮ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದ್ದು ಚರ್ಚೆ ಮತ್ತು ಪ್ರಸ್ತಾಪ ಮಾಡುವುದು ಇಂದಿನ ಸನ್ನಿವೇಶದಲ್ಲಿ ತಪ್ಪು ಎಂದರು.
ಜಿ.ಪಂ.ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಾತನಾಡಿ, ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನಾಗಿ ಮಾಡಿರುವುದು ಸಂತಸದ ವಿಚಾರವಾಗಿದ್ದು ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಿದ್ದಾರೆಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಲಿದ್ದು ಮುಂದಿನ ದಿನಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿ ಜಿಲ್ಲೆಯ ಅಭ್ಯುದ್ಯಯಕ್ಕೆ ಹೆಚ್ಚಿನ ಒತ್ತು ನೀಡುವ ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಪುರಸಭೆ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿಸಮಿತಿ ಅಧ್ಯಕ್ಷ ಸಿದ್ದರಾಜು, ಸದಸ್ಯ ಬಸವರಾಜು, ಮುಖಂಡರಾದ ಶಿವಲಿಂಗಯ್ಯ, ನಟರಾಜು, ಸಿದ್ದರಾಜು, ಮಹದೇವಯ್ಯ, ಕಿರಣ್, ಮರಿದೇವರು, ತಿಮ್ಮಯ್ಯ, ಹುಲಿಗೆರೆಪುರ ಮಹದೇವು, ರಾಜೇಂದ್ರ ಇತರರಿದ್ದರು.




