ಬಿಎಂಆರ್’ಸಿಎಲ್ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಆದ್ದರಿಂದ ದರ ಏರಿಕೆಗೆ ರಾಜ್ಯ ಸರ್ಕಾರ ಕಾರಣವಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.
ವಿರೋಧ ಪಕ್ಷದ ಸ್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ ಎಂದು ವಿವರಿಸಿದ್ದಾರೆ.
ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.




