ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಕಂದಾಯ ಸಚಿವಾಲಯ ಗುರುವಾರ ತಿಳಿಸಿದೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು.
ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ” ಎಂದು ಮಾಹಿತಿ ನೀಡಿದ್ದಾರೆ.




