Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ನಾಳೆ ವಿಜಯೇಂದ್ರ ನೇತೃತ್ವದಲ್ಲಿ ಭತ್ತದ ನಾಟಿ ; ಸಚ್ಚಿದಾನಂದ

ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತ್ತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸುವ ಸಲುವಾಗಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಕೊತ್ತತ್ತಿ ಗ್ರಾಮದಲ್ಲಿ ಮಾ.4ರಂದು ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಭತ್ತ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಎಸ್. ಸಚ್ಚಿದಾನಂದ ಇಂಡುವಾಳು ತಿಳಿಸಿದರು.

ಭತ್ತದ ನಾಟಿ ಕಾರ್ಯಕ್ರಮ ನಡೆಯಲಿರುವ ಕೊತ್ತತ್ತಿ ಗ್ರಾಮದ ಹೊರವಲಯದಲ್ಲಿನ ರೈತರದ ಸುಖೇಂದ್ರ ಮತ್ತು ಶಿವಬಸಪ್ಪ ಅವರ ಜಮೀನಿನಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾನುವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಈ ಹಿಂದೆ ಬಿಜೆಪಿ ಸರ್ಕಾರವು ಅಧಿಕಾರದಲ್ಲಿದ್ದಾಗ ರೈತರಿಗಾಗಿ ಹತ್ತಾರು ಕಾರ್ಯಕ್ರಮಗಳನ್ನು ರೂಪಿಸಿತ್ತು. ಕೇಂದ್ರ ಸರ್ಕಾರದ ಮಾದರಿಯಲ್ಲೇ ರೈತರಿಗೆ ಕೃಷಿ ಸಮ್ಮಾನ್ ಯೋಜನೆಯಡಿ 4000ರೂ. ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ರೈತರ ಮಕ್ಕಳಿಗಾಗಿ ವಿದ್ಯಾಸಿರಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೊದಲ ಬಾರಿಗೆ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸಿದ್ದರು. ಆದರೆ, ಈಗ ಕಾಂಗ್ರೆಸ್ ಸರ್ಕಾರವು ಬಿಜೆಪಿ ಜಾರಿಗೊಳಿಸಿದ್ದ ರೈತ ಪರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಜೊತೆಗೆ ಆರ್ಥಿಕ ನಷ್ಟಕ್ಕೂ ಒಳಗಾಗುತ್ತಿದ್ದಾರೆ. ಎಷ್ಟು ಮಂದಿ ರೈತರು ಕೃಷಿಯಿಂದ ವಿಮುಖ ರಾಗುತ್ತಿದ್ದಾರೆ. ಹೀಗಾಗಿ ಅವರನ್ನು ಮತ್ತೆ ಕೃಷಿಗೆ ಮರಳಿ ಕರೆ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಇದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಜ್ಯದ್ಯಂತ ಪ್ರವಾಸ ಕೈಗೊಂಡಿದ್ದು, ಅದಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭತ್ತ ನಾಟಿ ಕಾರ್ಯಕ್ರಮದ ಮೂಲಕ ಚಾಲನೆ ನೀಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಜೊತೆಗೆ ಪಕ್ಷದ ಹಲವಾರು ನಾಯಕರು, ಮುಖಂಡರು ಭತ್ತ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 6-7 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಕೊತ್ತತ್ತಿ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ವಿಶೇಷವಾಗಿ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ದೇವಾಲಯ ಕಾರ್ಯ ಹಾಗೂ ಹಬ್ಬ ಹರಿದಿನಗಳಲ್ಲಿ ನಡೆಯುವಂತೆ ರಾಗಿ ಮುದ್ದೆ -ಅವರೆಕಾಳು ಕೂಟು, ಅನ್ನ -ಸಾಂಬಾರ್ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಒಂದುವರೆಯಿಂದ ಎರಡು ಎಕರೆ ಪ್ರದೇಶದಲ್ಲಿ ಅಂದು ಭತ್ತ ನಾಟಿ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಸ್ಥಳೀಯ ರೈತರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪಕ್ಷದ ನಾಯಕರು ಕೃಷಿ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. ಮಾರ್ಚ್ 4ರಂದು ನಾಟಿಯಾಗಲಿರುವ ಭತ್ತವು ಕೊಯ್ಲಿಗೆ ಬಂದಾಗ ಪುನಃ ನಮ್ಮ ಇದೇ ನಾಯಕರು ಕೊಯ್ಲು ಪ್ರಕ್ರಿಯೆಯಲ್ಲೂ ಭಾಗವಹಿಸುವರು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್. ಇಂದ್ರೇಶ್, ಶ್ರೀರಂಗಪಟ್ಟಣ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ಶ್ರೀರಂಗಪಟ್ಟಣ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಧರ್, ಬೇವಿನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಹೇಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ