ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಿರುವ ಹಣಕಾಸು ಸಚಿವರೂ ಆದ ಸಿಎಂ ಸಿದ್ದರಾಮಯ್ಯ ಅವರು, ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು’ ಎಂದಿದ್ಧಾರೆ.
ಆರು ದಿನ ಮೊಟ್ಟೆ, ಬಾಳೆಹಣ್ಣು
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಣೆ ಮಾಡಿದ್ದಾರೆ.
ಶಾಲಾ ಮಕ್ಕಳಿಗೆ ಶ್ರೀಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ವಾರದಲ್ಲಿ 3 ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದ ಕಾರ್ಯಕ್ರಮವನ್ನು ವಾರದಲ್ಲಿ 5 ದಿನಗಳಿಗೆ ವಿಸ್ತರಿಸಿದ್ದು, ಇದಕ್ಕಾಗಿ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಗೌರವಧನ ಹೆಚ್ಚಳ
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.




