Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಜೆಟ್ ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ

ರಾಜ್ಯ ಸರಕಾರ ಮಂಡಿಸಿದ ಬಜೆಟ್ ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೆ ರಾಜ್ಯ ಸರಕಾರ ಅನ್ಯಾಯ ಎಸಗಿದೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಮಂಡ್ಯ ನಗರಸಭೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಕಾಂಗ್ರೆಸ್ ಸರಕಾರ ಕಳೆದ ಚುನಾವಣಾ ಕಾಲಕ್ಕೆ ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಆರನೇ ಗ್ಯಾರಂಟಿ ನೀಡಿತ್ತು. ಆದರೆ ಪೌರಕಾರ್ಮಿಕರಲ್ಲೆ ತಾರತಮ್ಯ ಎಸಗಿರುವ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸದ ಚಾಲಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಸಾವಿರಾರು ನೌಕರರಿಗೆ ಗುತ್ತಿಗೆ ಪದ್ದತಿಯನ್ನು ಹೇರಿದೆ ಎಂದು ಆಕ್ರೋಶ ಹೊರಹಾಕಿದರು.

ಹೊರಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಪರಿಣಾಮ ಈ ಬಾರಿಯ ಬಜೆಟ್‌ನಲ್ಲಿ ನೇರಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು. ಅದರಂತೆ ನಗರಾಭಿವೃದ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದ್ದರು. ಗುತ್ತಿಗೆ ಏಜೆನ್ಸಿಗಳ ಲಾಭಿಗೆ ಶರಣಾಗಿರುವ ರಾಜ್ಯ ಸರಕಾರ ಹೊರಗುತ್ತಿಗೆ ನೌಕರರಿಗೆ ವಿಶ್ವಾಸ ದ್ರೋಹ ಎಸಗಿದೆ. ನಲವತ್ತು ಸಾವಿರ ಮಂದಿ ಸ್ವಚ್ಚತೆ ಹಾಗೂ ಕುಡಿಯುವ ನೀರು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಈ ನೌಕರರ ಕ್ಷೇಮಾಭಿವೃದ್ದಿಗಾಗಿ ಈ ಬಾರಿಯ ಬಜೆಟ್ ನಲ್ಲಿ ಬಿಡಿಗಾಸನ್ನು ಸಹ ನೀಡಿಲ್ಲ ಎಂದು ಕಿಡಿಕಾರಿದರು.

ರಾಜ್ಯ ಸರಕಾರ ಎಚ್ಚೆತ್ತು ಗುತ್ತಿಗೆ ಪದ್ದತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸಬೇಕು.ತಪ್ಪಿದ್ದಲ್ಲಿ ರಾಜ್ಯಾದ್ಯಂತ ಕುಡಿಯುವ ನೀರು ಸ್ವಚ್ಚತೆ ಬಹಿಷ್ಕರಿಸಿ ಅನಿರ್ದಿಷ್ಟವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಈ ಮೂಲಕ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನೇಶ್, ರೂಪೇಶ್, ಎನ್ ನಾಗರಾಜು, ಪುನೀತ್, ಮಿಮ್ಸ್ ಹೊರಗುತ್ತಿಗೆ ನೌಕರರ ಸಂಘದ ಚಿನ್ನರಾಜು, ಕನ್ನಡಪರ ಹೋರಾಟಗಾರ ಎಂ ಎನ್ ಚಂದ್ರು ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ