ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ನಟಿ ರನ್ಯಾಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಪಾಸಣೆ ಇಲ್ಲದೇ ನೇರವಾಗಿ ಹೊರ ಹೋಗಲು ಅವಕಾಶ ನೀಡಲಾಗಿತ್ತು, ಇದಕ್ಕೆ ಪೊಲೀಸರು ಸಹಕಾರ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ.
ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು (ಪೊಲೀಸ್ ಪಡೆಗಳ ಮುಖ್ಯಸ್ಥರು) ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗೆ ಈ ತನಿಖೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಮತ್ತು ಸಹಾಯವನ್ನು ಒದಗಿಸುವಂತೆ ಸೂಚಿಸಲಾಗಿದೆ.
ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ರಾಮಚಂದ್ರ ರಾವ್ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.
ರಾಮಚಂದ್ರ ರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ಅವರನ್ನು ಕೂಡಲೇ ಬಂಧಿಸಲಾಗಿತ್ತು.




