ರಾಜ್ಯದ ಪೌರಕಾರ್ಮಿಕರ ಗುತ್ತಿಗೆ ಪದ್ದತಿಯನ್ನು ರದ್ದುಮಾಡಿದ ರಾಜ್ಯ ಸರ್ಕಾರವನ್ನು ಅಭಿನಂದಿಸುವ ಹಿನ್ನಲೆ ಪೌರಕಾರ್ಮಿಕರ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಾಗೂ 25 ವರ್ಷಗಳ ಬೆಳ್ಳಿ ಮಹೋತ್ಸವವನ್ನು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರ್‌ನಲ್ಲಿ ಏಪ್ರಿಲ್ 7ರಂದು ಆಯೋಜಿಸಲಾಗಿದೆ ಎಂದು ಪೌರ ಚಾಲಕರ ರಾಜ್ಯ ಕಾರ್ಯದರ್ಶಿ ಮದ್ದೂರು ಶ್ರೀನಿವಾಸ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿಯೇ ಕರ್ನಾಟಕ ಸರ್ಕಾರ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಮಾದರಿಯಾಗಿದ್ದು, 96 ಸಾವಿರ ಪೌರಕಾರ್ಮಿಕರು ಖಾಯಂ ನೌಕರರಾಗಿ ನೇಮಿಸಿದ ಸರ್ಕಾರವನ್ನು ಅಭಿನಂದಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಲಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ.ಮಹದೇವಪ್ಪ, ರಾಮಲಿಂಗರೆಡ್ಡಿ, ಕೆ.ಜೆ.ಜಾರ್ಜ್ ಭೈರತಿ ಸುರೇಶ್, ಪ್ರಿಯಾಂಕ ಖರ್ಗೆ, ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್, ರಹೀಂ ಖಾನ್, ಶಾಸಕರಾದ ಎಂ.ಕೃಷ್ಣಪ್ಪ, ರಿಜ್ಞಾನ್ ಅರ್ಷದ್ ಉಪಸ್ಥಿತರಿರಲಿದ್ದಾರೆ ಎಂದರು.
ವಿಶೇಷ ಆಹ್ವಾನಿತರಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಮಾವೇಶದಲ್ಲಿ 25 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರು ಭಾಗವಹಿಸಲಿದ್ದು, ಮಂಡ್ಯ ಜಿಲ್ಲೆಯಿಂದ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಮಂಡ್ಯ ತಾಲೂಕು ಅಧ್ಯಕ್ಷ ಗಣೇಶ್, ರಾಜ್ಯ ಉಪಾಧ್ಯಕ್ಷ ಶಿವಣ್ಣ, ಆರ್ಟಿಸ್ಟ್ ನಾಗರಾಜ್, ಶಂಕರ್ ಬಾಬು, ಮಣಿ ಇದ್ದರು.




