Thursday, November 19, 2026

ಪ್ರಾಯೋಗಿಕ ಆವೃತ್ತಿ

ಜಾತಿಗಣತಿ ವರದಿಯನ್ನು ತೆರೆದ ಸರ್ಕಾರ | ಮುಂದಿನ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನಕ್ಕೆ ಬರದೇ ಮತ್ತೆ ಮುಂದಿನ ಸಚಿವ ಸಂಪುಟದಲ್ಲಿ ಸುದೀರ್ಘ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲು ಸಂಪುಟ ತೀರ್ಮಾನಿಸಿದೆ.

ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಇಂದು ಜಾರಿಯ ಸಾಧ್ಯತೆ ಬಗ್ಗೆ ಚರ್ಚಿಸಲಾಗಿದ್ದು, ಅಂತಿಮವಾಗಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಗಿದೆ.

ಕಳೆದ ವರ್ಷ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿ-2024 ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದರು. ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಲಕೋಟೆ ಓಪನ್ ಮಾಡಲಾಯಿತು. ಸಚಿವರ ಕೈಗೆ ಜಾತಿ ಗಣತಿ ದತ್ತಾಂಶ ನೀಡಿದ ಬಳಿಕ ಆ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಆಲಿಸಿದ ಸಿಎಂ ಸಿದ್ದರಾಮಯ್ಯ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.

ಏಪ್ರಿಲ್ 17 ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಜಾತಿ ಜನಗಣತಿಯ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

“ಜಾತಿ ಜನಗಣತಿ ವರದಿಯು 50 ಸಂಪುಟಗಳಲ್ಲಿದೆ. ಇದು 1.38 ಕೋಟಿ ಕುಟುಂಬಗಳ 5.98 ಕೋಟಿ ಜನರನ್ನು ಒಳಗೊಂಡಿದೆ. ಇದು ಶೇಕಡಾ 94.77 ಜನರನ್ನು ಒಳಗೊಂಡಿದೆ. ಕೇವಲ ಶೇಕಡಾ 5.23 ರಷ್ಟು ಜನ ಮಾತ್ರ ಇದರ ವ್ಯಾಪ್ತಿಯಿಂದ ಹೊರಗಿದ್ದಾರೆ” ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಜಾತಿ ಗಣತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಫೆಬ್ರವರಿ 29, 2024 ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು. ಆದರೆ ಈ ವರದಿಗೆ ಕಾಂಗ್ರೆಸ್‌ನಲ್ಲೇ ಆಂತರಿಕವಾಗಿ ವಿರೋಧ ವ್ಯಕ್ತವಾಗಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ನಾಯಕರುಗಳು ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ