ಹಾಸ್ಟೆಲ್ ಹೊರಗುತ್ತಿಗೆ ನೌಕರರ ಕನಿಷ್ಠ ವೇತನ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಅಭಿನಂದನಾ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ವಸತಿ ಶಾಲಾ ಹೊರಗುತ್ತಿಗೆ ನೌಕರರು ರಾಜ್ಯ ಸರ್ಕಾರದ ಕ್ರಮವನ್ನು ಶ್ಲಾಘಿಸಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಬಳಿಕ ಮಾತನಾಡಿದ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ್ ಮತ್ತು ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರು, ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ.ಗ್ರೂಪ್ ಸಿಬ್ಬಂದಿಗಳು ಕಳೆದ 15-20 ವರ್ಷಗಳಿಂದ ಯಾವುದೇ ಸೇವಾಭದ್ರತೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯ,ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಾಕಷ್ಟು ಹೋರಾಟ ಮಾಡಿದ ಪ್ರತಿಫಲವಾಗಿ ರಾಜ್ಯ ಸರ್ಕಾರ 11-04-2025 ರಂದು ಕಾರ್ಮಿಕ ಇಲಾಖೆಯು 4 ವಲಯಗಳ ಬದಲಾಗಿ 3 ವಲಯಗಳನ್ನು ಮಾಡಿದೆ. ಕನಿಷ್ಟ ವೇತನ 31 ಸಾವಿರ ಕೇಳಿದ್ದಕ್ಕೆ 25,714ರೂ. ಗಳನ್ನು ನಿಗದಿ ಮಾಡಿ ಗೆಜೆಟಿಯರ್ ನೋಟಿಪಿಕೇಷನ್ ಗೆ ಕಾರ್ಮಿಕ ಇಲಾಖೆ ಮೂಲಕ ರಾಜ್ಯ ಸರ್ಕಾರಕ್ಕೆ ಕಳಿಸಿದೆ. ಇದನ್ನು ನಮ್ಮ ಸಂಘ ಸ್ವಾಗತಿಸುತ್ತದೆ ಎಂದು ಹರ್ಷವ್ಯಕ್ತಪಡಿಸಿದರು.
ಜೊತೆಗೆ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆಗೆ ಅಭಿನಂದನೆಗಳನ್ನು ತಿಳಿಸುತ್ತೇವೆ. ಸಂಘದ ಹೋರಾಟಕ್ಕೆ ಜಯ ಸಿಕ್ಕಿದೆ. ಈ ವಿಜಯೋತ್ಸವವನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಮ್ಮ ನೌಕರರು ಮಾಡುತ್ತಿದ್ದು ಇದರ ಭಾಗವಾಗಿ ಇಂದು ಮಂಡ್ಯ ಜಿಲ್ಲೆಯಲ್ಲಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಕನಿಷ್ಟ ವೇತನ 35 ಸಾವಿರ, ಸೇವಾ ಭದ್ರತೆ, ಕಾಯಂಗಾಗಿ ಕಳೆದ 15 ವರ್ಷಗಳಿಂದ ಹೋರಾಟ ಮಾಡುತ್ತಿದ್ದು ಇದರ ಬಗ್ಗೆ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಕಾಳಜಿ ವಹಿಸಬೇಕಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ ಎಂದರು.
ಸಂಭ್ರಮಾಚರಣೆಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ, ಕೃಷ್ಣ, ಭಾಗ್ಯ, ವಿಜಯ, ಗೌರಮ್ಮ, ಸವಿತಾ, ಇಂದ್ರಾಣಿ, ರೂಪ, ಸುನಂದಮ್ಮ, ಸುಮಿತ್ರಾ, ಅನಿತಾ, ಜಯಮ್ಮ, ಸೌಭಾಗ್ಯ, ಶಶಿಕಲಾ, ಆಶಾರಾಣಿ, ಲಕ್ಷ್ಮಮ್ಮ, ಮಂಗಳ ಮತ್ತಿತರರಿದ್ದರು.




