ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 8 ರಂದು ಮಂಡ್ಯನಗರಕ್ಕೆ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಂಡ್ಯನಗರದ ಕನಕ ಭವನ ಆವರಣದಲ್ಲಿ ಬಾಲಕರ ವಿದ್ಯಾರ್ಥಿನಿಲಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷರೂ ಆದ ಸಿ.ಡಿ.ಗಂಗಾಧರ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅಂದು ಮಂಡ್ಯನಗರದ ಗಿರಿಜಾ ಥಿಯೇಟರ್ ಪಕ್ಕ ಎಂಡಿಸಿಸಿ ಬ್ಯಾಂಕ್ ನೂತನ ಆಡಳಿತ ಕಛೇರಿಯ ಶಂಕುಸ್ಥಾಪನೆ ನೆರವೇರಿಸಿ, ಮೈಷುಗರ್ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಲಿದ್ದಾರೆ. ನಂತರ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸುವರು ಎಂದರು.
ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ಅಧ್ಯಕ್ಷತೆಯ ಶಂಕುಸ್ಥಾಪನೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಮಹಾಸಂಸ್ಥಾನದ ಶಿವನಂದಾಪುರಿ ಸ್ವಾಮೀಜಿ ವಹಿಸಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಚಿವರಾದ ಶಿವರಾಜ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಭೈರತಿ ಸುರೇಶ್, ಹೆಚ್.ಎಂ.ರೇವಣ್ಣ, ಜಮೀರ್ ಅಹಮದ್ ಖಾನ್, ಶಾಸಕರಾದ ರಮೇಶ್ಬಾಬು ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ ಘನ ಉಪಸ್ಥಿತಿ ವಹಿಸುವರು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳೂ, ಕಾಂಗ್ರೆಸ್ ಮುಖಂಡರು ಸೇರಿದಂತೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಅಂದು ಕೆಮ್ಮುಗಿಲು ಪತ್ರಿಕೆಯ 8 ಪುಟಗಳ ಆವೃತ್ತಿಯನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ಸುರೇಶ್, ಉಪಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ರಾಜು, ನಗರಸಭೆ ಮಾಜಿ ಸದಸ್ಯ ಮಹೇಶ್, ಸುಂಡಹಳ್ಳಿ ಮಂಜುನಾಥ್, ವಿಜಿ ಕುಮಾರ್, ಕೆಂಚಪ್ಪ ಇದ್ದರು.




