Sunday, November 22, 2026

ಪ್ರಾಯೋಗಿಕ ಆವೃತ್ತಿ

ಹಂತ ಹಂತವಾಗಿ ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ಹಂಚಿಕೆ; ಹೆಚ್.ಡಿ.ಕೆ ಭರವಸೆ

ಕೇಂದ್ರ ಸರಕಾರ ಪ್ರಾಯೋಜಿತ ಪಿಎಂ ಇ-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯ ಸ್ವೀಕರಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಲ್ಲಿರುವ ಮನವಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ನವದೆಹಲಿಯ ಸಚಿವಾಲಯದಲ್ಲಿ ತಮ್ಮನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ ಅವರ ಜತೆ ಕುಮಾರಸ್ವಾಮಿ ಅವರು ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು.

ಅಲ್ಲದೆ ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಅವರು, ವಿದ್ಯುತ್‌ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಸೂಕ್ತ ಬೆಂಬಲ ಸಿಗುತ್ತದೆ ಎಂದು ನಾನು ಖಚಿತಪಡಿಸುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ ಕುಮಾರಸ್ವಾಮಿ ಸಾರಿಗೆ ವ್ಯವಸ್ಥೆಯಲ್ಲಿ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಹನಗಳು ಹೊರಸೂಸುವ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸುವ ನಿಟ್ಟಿನಲ್ಲಿ ಕರ್ನಾಟಕ ವೂ ಸೇರಿ ಭಾರತದಾದ್ಯಂತ ವಿದ್ಯುತ್‌ ಚಾಲಿತ ಬಸ್ಸುಗಳ ಅಳವಡಿಕೆಗೆ ಕೇಂದ್ರ ಸರಕಾರವು ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದೆ . ಕರ್ನಾಟಕವು ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಖಂಡಿತವಾಗಿಯೂ ಹೆಚ್ಚು ಬಸ್ಸುಗಳನ್ನು ಪಡೆಯುತ್ತದೆ ಎಂದು ತಿಳಿಸಿದರು.

PM E-ಡ್ರೈವ್ ಉಪಕ್ರಮದಡಿಯಲ್ಲಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್‌ ಚಾಲಿತ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್‌ ಗಳು, ಬಸ್ ಡಿಪೋಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಸಂಬಂಧಿತ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಚರ್ಚೆ ನಡೆಸುತ್ತಿವೆ. ಈಗಾಗಲೇ ಗುರುತಿಸಲಾದ ನಗರ ಸಮೂಹಗಳಲ್ಲಿ ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಾಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ