Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರೈತರು ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಬೇಕಿದೆ : ನಂದಿನಿ

ಮಂಡ್ಯ ಜಿಲ್ಲೆಯ ರೈತರು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ಭತ್ತ, ಕಬ್ಬು ಬೆಳೆಗಳ ಜೊತೆಗೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ರೈತರನ್ನು ಉದ್ದೇಶಿಸಿ ಹೇಳಿದರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಹಾಗೂ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಇಂದು ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಗತಿಪರ ರೈತರಿಗೆ ಸಮಗ್ರ ಕೃಷಿ ಪದ್ಧತಿ, ಹನಿ ನೀರಾವರಿ ಅಳವಡಿಕೆ ಹಾಗೂ ವಿವಿಧ ಬೆಳೆಗಳ ಕೋಯ್ಲೋತ್ತರ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಣ್ಣಿನ ಫಲವತ್ತತೆಯಲ್ಲಿ, ನೀರಿನ ಸೌಲಭ್ಯದಲ್ಲಿ ಮಂಡ್ಯ ಜಿಲ್ಲೆಯು ಶ್ರೀಮಂತಿಕೆಯನ್ನು ಹೊಂದಿದೆ. ಅದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ರೈತರು ಒಂದೇ ರೀತಿಯ ಬೆಳೆಗಳನ್ನು ಬೆಳೆಯದೆ ಇತರೆ ಲಾಭದಾಯಕ ಬೆಳೆಗಳನ್ನು ಸಹ ಬೆಳೆಯಿರಿ ಎಂದು ಕಿವಿಮಾತು ಹೇಳಿದರು.

ರೈತರು ಉದ್ದಿಮೆದಾರರಾಗಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂಬುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದ್ದು, ಯಾವ ಮಣ್ಣಿಗೆ ಯಾವ ಬೆಳೆ ಬೆಳೆಯಬೇಕು, ಯಾವ ವರ್ತಮಾನದಲ್ಲಿ ಯಾವ ಬೆಳೆ ಉತ್ತಮ, ಯಾವುದು ಲಾಭದಾಯಕ ಎಂಬುದನ್ನು ಅರಿತು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಿ ಎಂದರು.

ಮೀನು ಅರೋಗ್ಯಕರ ಆಹಾರವಾಗಿದೆ ಆದರೆ ಮಂಡ್ಯ ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಮೀನು ಮಾರಾಟ ಕಡಿಮೆಯಿದೆ. ರೈತ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳ ಮೂಲಕ ಮೀನುಗಾರಿಕೆ ಕುರಿತು ತರಬೇತಿಗಳನ್ನು ನೀಡಿ ಹಾಗೂ ಮೀನು ಮಾರಾಟ ಮಳಿಗೆಗಳನ್ನು ತೆರೆಯಲು ಲೈಸನ್ಸ್ ಸೇರಿತಂತೆ ಇತರೆ ಸಹಾಯಗಳನ್ನು ದೊರಕಿಸಿಕೊಡಲು ಮುಂದಾಗಿ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಸಮಗ್ರ ಕೃಷಿ ಎಂದರೆ ವ್ಯವಸಾಯದ ಒಟ್ಟಿಗೆ ಮೀನುಗಾರಿಕೆ, ತೋಟಗಾರಿಕೆ ಹಾಗೂ ಪಶುಸಂಗೋಪನೆ ಎಲ್ಲವನ್ನು ಒಳಗೊಂಡಿರುವುದು ಆಗಿದೆ. ಆಗಾಗಿ ಕೋಳಿ ಸಾಕಾಣಿಕೆ, ಹಸು ಸಾಕಾಣಿಕೆ ಹಾಗೂ ಕುರಿ ಸಾಕಾಣಿಕೆ ಪದ್ಧತಿಗಳನ್ನು ಅಳವಡಿಸಿಕೊಂಡು ಲಾಭದಾಯಕವಾಗಿ ಮುಂದುವರಿಯಿರಿ ಎಂದು ರೈತ ಭಾಂದವರಿಗೆ ಸಲಹೆ ನೀಡಿದರು.

ರೈತರ ಸಮಸ್ಯೆಗಳಿಗೆ ಸ್ಪಂದಿಸಿ

ಬೆಂಗಳೂರು ಜಿಲ್ಲಾ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಮಂಜುನಾಥ್ ಗೌಡ  ಮಾತನಾಡಿ ರೈತರ ಕಷ್ಟವನ್ನು ನೀಗಿಸಲು ಮತ್ತು ರೈತರು ಉದ್ದಿಮೆದಾರರಾಗಲು ಸಲಹೆಗಳನ್ನು ನೀಡಿ ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ತೋಟಗಾರಿಕೆ, ಮೀನುಗಾರಿಕೆ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ವ್ಯವಸಾಯದಲ್ಲಿ ಒಂದೇ ಹಾದಿಯಲ್ಲಿ ಸಾಗಿದರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುವುದಿಲ್ಲ, ಸಮಗ್ರ ಕೃಷಿ ಪದ್ಧತಿಯೊಂದಿಗೆ ವ್ಯವಸಾಯ ಮಾಡಲು ಒಮ್ಮೆ ಪ್ರಯತ್ನಿಸಿ ಎಂದು ರೈತರಿಗೆ ಹೇಳಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಹಿತ್ತಲಮಣಿ ಅವರು ಮಾತನಾಡಿ ರೈತರು ದೇಶದ ಹಸಿವು ನೀಗಿಸುವವರು ಅವರನ್ನು ಗೌರವಿಸುವುದು ಎಲ್ಲರ ಆದ್ಯ ಕರ್ತವ್ಯ ಮೊದಲಿಗೆ ರೈತರ ಮಹತ್ವ ತಿಳಿದು ರೈತರನ್ನು ಸಮಾಜ ಗೌರವಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ನಾಗರಾಜು, ರೇಷ್ಮೆ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ರೂಪಶ್ರೀ, ವಿಜ್ಞಾನಿಗಳಾದ ಮಮತಾ, ಆಂಜನಪ್ಪ ಮತ್ತು ವಿಜಯಲಕ್ಷ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ