ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ನೌಕರರು ನಗರದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದರು.
ನಗರಸಭೆ ಮುಂಭಾಗ ಜಮಾಯಿಸಿದ ನೌಕರರು, ಸರ್ಕಾರ, ಸಚಿವರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂಎತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಪೌರ ನೌಕರರ ಸಂಘದ ಕಾರ್ಯಕಾರಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆ ಅನಿವರ್ಯವಾಗಿತ್ತು ಎಂದು ನೌಕರರು ತಿಳಿಸಿದರು.
ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ಯನಿರ್ವಹಿಸುವ ಪೌರ ನೌಕರರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಚತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಕೆಲಸಗಳನ್ನು ಸ್ಥಗಿತಗೊಳಿಸಲಿದ್ದಾರೆ. ಬೇಡಿಕೆಗಳ ಈಡೇರುವರೆವಿಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಬೇಡಿಕೆಗಳೇನು ?
ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗದು ರಹಿತ ಆರೋಗ್ಯಚಿಕಿತ್ಸಾ ಸೌಲಭ್ಯ ಯೋಜನೆಯಾದ ಜ್ಯೋತಿ ಸಂಜೀವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನೂ ನೀಡಬೇಕು.
ರಾಜ್ಯದ ನಗರ ಸ್ಥಳೀಯಸಂಸ್ತೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರ, ವಾಹನ ಚಾಲಕರು, ಲೋಡರ್ಗಳು, ಕ್ಲೀನರ್ಗಳು, ಸ್ವಚ್ಚತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು.
ವಾಹನ ಚಾಲಕರು, ನೀರು ಪೂರೈಕೆ ನೌಕರರು ನೇರ ಪಾವತಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ನೌಕರರಿಗೆ ಎಸ್ಎಫ್ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣ, ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ನಾಗರಾಜು, ಮುಖಂಡರಾದ ಮುತ್ತಾಲಯ್ಯ, ಮಹದೇವು, ನಾಗೇಶ್, ರಾಜೇಗೌಡ, ಹೊನ್ನಯ್ಯ, ಬೊಮ್ಮಯ್ಯ, ಅಮ್ಮಯ್ಯಮ್ಮ, ಅರ್ಚನಾ, ಗಿರೀಶ್ ಎಲೆಚಾಕನಹಳ್ಳಿ, ದಿನೇಶ್, ಮಹದೇವು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




