ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಿದ್ದರಾಜು ಮತ್ತು ಉಪಾಧ್ಯಕ್ಷರಾಗಿ ಲಕ್ಷ್ಮಿ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ತೆರವಾದ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಜು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಿ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣೆ ಅಧಿಕಾರಿ ಮಹದೇವ ಸ್ವಾಮಿ ತಿಳಿಸಿದರು.
ನಂತರ ಮಾತನಾಡಿದ ಸಿದ್ದರಾಜು ಎಲ್ಲಾ ಸದಸ್ಯರನ್ನು ಒಟ್ಟುಗೂಡಿಸಿಕೊಂಡು ಗ್ರಾಮ ಪಂಚಾಯತಿಯಲ್ಲಿ ಒಳಪಡುವ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಸ್ವಚ್ಛತೆ ಮತ್ತು ಆರೋಗ್ಯಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಸದಸ್ಯರನ್ನು ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಇದೆ ವೇಳೆಯಲ್ಲಿ ಉಪಾಧ್ಯಕ್ಷೆ ಲಕ್ಷ್ಮಿ, ಗ್ರಾಮ ಪಂಚಾಯಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಪಿ ರಾಜು, ಪಿಡಿಓ ಮಹದೇವ ಮೂರ್ತಿ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹಾಜರಿದ್ದರು.




