ಮದ್ದೂರು ತಾಲ್ಲೂಕಿನ ಭಾರತೀನಗರ ಸಿರಿ ಕನ್ವೆನ್ಸನ್ ಸಭಾಂಗಣದಲ್ಲಿ ಮೇ 30 ರಂದು ಬೆಳಿಗ್ಗೆ 10.30 ಗಂಟೆಗೆ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಚಿದಂಬರಮೂರ್ತಿ ತಿಳಿಸಿದರು.
ಮದ್ದೂರು ತಾಲ್ಲೂಕು ಭಾರತೀನಗರದ ಶಾಸಕರ ಕಛೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಮಾವೇಶದ ಜೊತೆಗೆ ಡಾ.ಬಿಆರ್.ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ, ಅಧ್ಯಕ್ಷರ ಪದಗ್ರಹಣ, ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ತಾಲ್ಲೂಕಿನ 5 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಷ್ಕಾರ, ಮನ್ಮುಲ್ ನಿರ್ದೇಶಕರಿಗೆ ಅಭಿನಂದನೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭಾವಚಿತ್ರವನ್ನು ಮಂಡ್ಯ ವೃತ್ತದಿಂದ ಮೆರವಣಿಗೆ ಮಾಡಲಾಗುತ್ತದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ.ಎಂ.ಉದಯ್ ನೆರವೇರಿಸಲಿದ್ದು, ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ವೆಂಕಟರಮಣಗೌಡ, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಎಂ.ಎನ್.ಶ್ರೀಧರ್, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಅಮೀನ್ ಶಿವಲಿಂಗಯ್ಯ ಪರಿಶಿಷ್ಟ ವಿಭಾಗದ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದರು.
ಈ ವೇಳೆ ಮುಖಂಡರಾದ ಅಮೀನ್ ಶಿವಲಿಂಗಯ್ಯ, ಎಂ.ಟಿ.ತಿಮ್ಮಯ್ಯ, ಈ.ರುದ್ರಯ್ಯ, ಅಣ್ಣುರು ನಿರಂಜನ, ಚಿನ್ನಸ್ವಾಮಿ, ಗುಡಿಗೆರೆ ಪ್ರಸಾದ್, ಕೆಂಪರಾಜು ಮತ್ತಿತರರು ಉಪಸ್ಥಿತರಿದ್ದರು.




