ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ನಡುವೆ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಕಾಲ್ತುಳಿತ ದುರಂತದಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಆರು ಜನರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಾಲ್ವರು ವೈದೇಹಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಹಲವರು ಗಾಯಾಳುಗಳು ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗಾಯಾಳುಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ವೈದ್ಯರಿಂದಲೂ ಮಾಹಿತಿ ಪಡೆದಿದ್ದಾರೆ.
ತೀವ್ರ ಆಘಾತವಾಗಿದೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.
ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ. ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಣದು ಅವರು ತಿಳಿಸಿದ್ಧಾರೆ.




