ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಪಾಂಡವಪುರದ ರೈಲ್ವೆ ನಿಲ್ದಾಣದಲ್ಲಿ ಹೂವಿನ ವ್ಯಾಪಾರದ ಜೊತೆ ಪೂಜಾ ಸಾಮಾಗ್ರಿಗಳನ್ನು ಮಾರಾಟ ಮಾಡುವ ಮೂಲಕ ಸ್ವಾವಲಂಬಿಯಾಗಿ ಬದುಕು ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಅವರು ಗುರುವಾರ ಪಾಂಡವಪುರ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಪಾಂಡವಪುರದ ರೈಲ್ವೆ ನಿಲ್ದಾಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಹೂ, ಹಣ್ಣು, ಪೂಜೆ ಸಾಮಾಗ್ರಿಗಳ ಅಂಗಡಿ ತೆರೆದಿರುವ ಜಯಲಕ್ಷ್ಮಮ್ಮ ಅವರನ್ನು ಭೇಟಿ ಮಾಡಿ ಅವರೊಂದಿಗೆ ಮಾತಕತೆ ನಡೆಸಿ ಅಭಿನಂದಿಸಿದರು.
ಸರ್ಕಾರದ ಯೋಜನೆಯ ಹಣದಲ್ಲಿ ಸಣ್ಣ ವ್ಯಾಪಾರ ಪ್ರಾರಂಭಿ ಸ್ವಾವಲಂಬಿಯಾಗಿರುವುದು, ಮಹಿಳೆಯರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ನಿದರ್ಶನವಾಗಿದೆ ಎಂದು ಪುಷ್ಪ ಅಮರನಾಥ್ ತಿಳಿಸಿದರು.
ಶಕ್ತಿ ಯೋಜನೆಯಿಂದ ಹಣ ಉಳಿತಾಯ
ಜಯಲಕ್ಷ್ಮಮ್ಮ ಮಾತನಾಡಿ ಗ್ಯಾರಂಟಿ ಯೋಜನೆಗಳು ಜೀವನ ಸಾಗಿಸಲು ಸಹಕಾರಿಯಾಗಿದೆ. ಶಕ್ತಿ ಯೋಜನೆಯಿಂದ ಪ್ರತಿನಿತ್ಯ ನೂರರಿಂದ ನೂರೈವತ್ತು ರೂಪಾಯಿ ಹಣ ಉಳಿತಾಯವಾಗುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ ಪುಷ್ಪಾ ಅಮರನಾಥ್ ಹೂವಿನ ಹಾರ ಹಾಕಿ ಜಯಲಕ್ಷ್ಮಮ್ಮ ಅವರನ್ನು ಸನ್ಮಾನಿಸಿ, ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು.




