Friday, November 20, 2026

ಪ್ರಾಯೋಗಿಕ ಆವೃತ್ತಿ

ಮುಸ್ಲಿಮರ ಅವಹೇಳನ | ಶಾಸಕ ರಮೇಶ್ ಬಂಡಿಸಿದ್ದೇಗೌಡ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಸಮಸ್ತ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿರುವ ಶ್ರೀರಂಗಪಟ್ಟಣ ಶಾಸಕ ಎ.ಬಿ. ರಮೇಶ್ ಬಾಬು ಬಂಡಿಸಿದ್ದೇಗೌಡ ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವಂತೆ ಆಗ್ರಹಿಸಿ ಮಂಡ್ಯನಗರದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾಗೂ ಕರ್ನಾಟಕ ಜನಶಕ್ತಿ ಸೇರಿದಂತೆ ವಿವಿಧ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು ರಮೇಶ್ ಬಂಡಿಸಿದ್ದೇಗೌಡ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕು ಮಹದೇವಪುರ ಗ್ರಾಮ ಅದಾಲತ್ ನಲ್ಲಿ ಶ್ರೀರಂಗಪಟ್ಟಣ ಶಾಸಕ ಎ.ಬಿ. ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡಿ ಅಧಿಕಾರಿಗಳನ್ನು ಬೆದರಿಸಿರುವುದು ಖಂಡನೀಯ ಎಂದು ಕಿಡಿಕಾರಿದರು.

ಶ್ರೀರಂಗಪಟ್ಟಣ ತಾಲ್ಲೂಕು ಮಹದೇವಪುರ ಗ್ರಾಮ ಅದಾಲತ್ ನಲ್ಲಿ ಕೆಲವು ರೈತ ಮುಸ್ಲಿಮರು ಬಗರ್ ಹುಕುಂ ಜಮೀನನ್ನು ಉಳುಮೆ ಮಾಡುತ್ತಿದ್ದು, ಅದಕ್ಕೆ ಸಂಬಂಧಿಸಿದ ಸಾಗುವಳಿ ಪತ್ರಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಹತ್ತಿರ ತಮ್ಮ ಹೆಸರಿಗೆ ದಾಖಲೆಗಳನ್ನು ಮಾಡಿಕೊಡಲು ಅರ್ಜಿಯನ್ನು ಸಲ್ಲಿಸಿದ್ದು, ಈ ಸಂಬಂಧ ರಮೇಶ್‌ಬಾಬು ಬಂಡಿಸಿದ್ದೇಗೌಡ ರವರು ಅಧಿಕಾರಿಗಳಿಗೆ ಆ ಸಾಬರಿಗೆ ದಾಖಲೆಗಳನ್ನು ಮಾಡಿಕೊಟ್ಟರೆ ನಿಮ್ಮನ್ನು ನೇಣಿಗೇರಿಸುತ್ತೇನೆ ಎಂದು ಸಾರ್ವಜನಿಕವಾಗಿಯೇ ಬೆದರಿಕೆ ಹಾಕಿದ್ಧಾರೆ. ಚುನಾವಣಾ ಸಂದರ್ಭದಲ್ಲಿ ಎಲ್ಲ ಧರ್ಮ, ಜಾತಿಯವರ ಬಳಿ ಕೈ ಮುಗಿದು ಮತ ಬೇಡುವ ಶಾಸಕರು, ಈಗ ಒಂದು ಧರ್ಮದ ಜನರ ವಿರುದ್ದ ಹೇಳಿಕೆ ನೀಡುತ್ತಿರುವುದು ಅವರ ಕಪಟ ನಾಟಕವನ್ನು ಎತ್ತಿ ತೋರಿಸುತ್ತಿದೆ ಎಂದು ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ ಕಿಡಿಕಾರಿದರು.

ಪ್ರಜಾ ಪ್ರಭುತ್ವದ ಮೌಲ್ಯಗಳನ್ನು ಬದಿಗೊತ್ತಿ ನಾನೊಬ್ಬ ಶಾಸಕ, ಜನಸೇವಕ ಎಂಬುವುದನ್ನೂ ಮರೆತು ಅವಹೇಳನ ಮಾಡಿರುವ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಕೋಮುವಾದಿ ದರ್ಪದ ಶಾಸಕರನ್ನು, ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಸಿದ್ದರಾಜು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಜಿಲ್ಲಾಧ್ಯಕ್ಷ ಮೊಕ್ತಾರ್ ಅಹಮದ್, ಪ್ರಧಾನ ಕಾರ್ಯದರ್ಶಿಯಾದ ಅತೀಖ್ ಅಹಮದ್, ಮುಖಂಡ ಮುಕುಂದ,ಮಹಿಳಾ ಮುನ್ನಡೆಯ ಶಿಲ್ಪಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ