ರಾಜ್ಯದಲ್ಲಿ 30 ವರ್ಷಗಳ ಹಿಂದೆ ರದ್ದು ಮಾಡಿದ್ದ ವಿದ್ಯಾರ್ಥಿ ಸಂಘದ ಚುನಾವಣೆಗೆ ಅನುಮತಿ ನೀಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದು, ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಸಿ.ಎಂ.ದ್ಯಾವಪ್ಪ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯಲು ಸದಾವಕಾಶವಿದ್ದು, ರಾಹುಲ್ಗಾಂಧಿ ಅವರ ಅಭಿಪ್ರಾಯದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿ ಸಂಘ ಸ್ಥಾಪನೆ, ಸಂಘದ ಚುನಾವಣೆಗೆ ನಡೆಸಲು ಅನುಮತಿ ನೀಡಲಾಗುವುದೆಂದಿದ್ದಾರೆ ಎಂದರು.
೨೦೨೮ರಲ್ಲಿ ರಾಜ್ಯದಲ್ಲಿ ಮತ್ತೇ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರಲಿದ್ದು, ೨೦೨೯ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ೧೭೭೭ ಎಕರೆ ರೈತರ ಭೂಮಿ ಸ್ವಾಧೀನ ಕೈಬಿಟ್ಟಿರುವ ರಾಜ್ಯ ಸರ್ಕಾರ ಧರ್ಮಸ್ಥಳದ ನೂರಾರು ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ ಹಾಗೂ ಕೊಲೆ ಪ್ರಕರಣದ ತನಿಖೆಗೆ ಎಸ್ಐಟಿ ತನಿಖಾ ತಂಡ ರಚನೆ ಮಾಡಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ಗೋಷ್ಠಿಯಲ್ಲಿ ಎನ್ಎಸ್ಯುಐ ಜಿಲ್ಲಾಧ್ಯಕ್ಷ ಬಂಡೂರು ಮಂಜು, ಮುಖಂಡರಾದ ನಂದೀಶ್, ಉಲ್ಲಾಸ್, ಎನ್.ಮಹೇಶ್ ಇದ್ದರು.




