Monday, November 23, 2026

ಪ್ರಾಯೋಗಿಕ ಆವೃತ್ತಿ

ಎಸ್ಸಿ,ಎಸ್ಟಿ ನೌಕರರಿಗೆ ಬಡ್ತಿ ಮೀಸಲಾತಿಯಲ್ಲಿ ಅನ್ಯಾಯ : ಕೃಷ್ಣಮೂರ್ತಿ

ಅಹಿಂದ ಹೆಸರಿನಲ್ಲಿ ಎಸ್ಸಿ,ಎಸ್ಟಿಗಳ ಮತವನ್ನು ಸಾರಾ ಸಗಟಾಗಿ ಪಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ, ಎಸ್ಸಿ ಎಸ್ಟಿ ನೌಕರರಿಗೆ ನೇಮಕಾತಿ ಮತ್ತು ಬಡ್ತಿಯಲ್ಲಿ ದೊಡ್ಡಮಟ್ಟದ ಅನ್ಯಾಯ ಮಾಡುತ್ತಿದೆ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಟು ಮತ್ತು ಅಧಿಕಾರಕ್ಕಾಗಿ ನಾವು ದಲಿತ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯರವರ ಕಾಂಗ್ರೆಸ್ ಸರ್ಕಾರ ರಾಜ್ಯದ ೩೧ ಜಿಲ್ಲೆಗಳಲ್ಲಿ ಕೇವಲ ಒಂದು ಜಿಲ್ಲೆಗೆ ಮಾತ್ರ ಎಸ್ಸಿಎಸ್ಪಿ ಸಮಾಜಕ್ಕೆ ಸೇರಿದ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿದೆ. ಬಿಜೆಪಿ ಅವಧಿಯಲ್ಲಿ೧೧ ಹುದ್ದೆಗಳಲ್ಲಿ ಜಿಲ್ಲಾಧಿಕಾರಿಯಂತಹ ಮಹತ್ವದ ಹುದ್ದೆಗಳನ್ನು ನೀಡಿತ್ತು ಎಂದರು.

ಇನ್ನು ರಾಜ್ಯದ ಪದವಿಪೂರ್ವ ಶಿಕ್ಷಣ, ಗೃಹ, ಅರಣ್ಯ, ತೋಟಗಾರಿಕೆ, ಕೃಷಿ, ನಗರಾಭಿವೃದ್ಧಿ, ಸಾರಿಗೆ, ಡಿಪಿಎಆರ್, ಇಂಧನ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಮುಂಬಡ್ತಿಗೆ ಅರ್ಹರಾಗಿರುವ ಎಸ್ಸಿಎಸ್ಪಿ ನೌಕರರಿಗೆ ಸಕಾಲದಲ್ಲಿ ಬಡ್ತಿ ನೀಡದೆ ವಂಚನೆ ಮಾಡಲಾಗುತ್ತಿದೆ ಎಂದು ಉದಾಹರಣೆ ನೀಡಿ ಆರೋಪಿಸಿದರು.

ನರೇಂದ್ರಸ್ವಾಮಿ ರಾಜೀನಾಮೆಗೆ ಆಗ್ರಹ

ಪದವಿ ಪೂರ್ವ ಕಾಲೇಜುಗಳ ಸುಮಾರು ೮೦ ಎಸ್ಸಿ,ಎಸ್ಟಿ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ ನೀಡದೇ ಸಾಂವಿಧಾನಿಕ ಸಂಸ್ಥೆಯಾಗಿರುವ ಶಾಸಕ ನರೇಂದ್ರಸ್ವಾಮಿ ನೇತೃತ್ವದ ಸದನ ಸಮಿತಿಯ ಆದೇಶವನ್ನು ಕಡೆಗಣಿಸಿ ಎಸ್.ಸಿ,ಎಸ್.ಟಿ ಜನಾಂಗದ ೮೦ ಉಪನ್ಯಾಸಕರಿಗೆ ಅನ್ಯಾಯ ಮಾಡಲೆಂದೇ ಇತರರಿಗೆ ಬಡ್ತಿ ನೀಡಲಾಗಿದೆ. ಸದನ ಸಮಿತಿ ಆದೇಶವನ್ನು ಪಾಲಿಸದಿದ್ದರೆ ಸದನ ಸಮಿತಿಯನ್ನೇ ರದ್ದುಗೊಳಿಸಿ, ಇಲ್ಲವೇ ಎಸ್.ಸಿ/ಎಸ್.ಟಿ ಹಿತರಕ್ಷಣೆ ಮಾಡಲು ವಿಫಲವಾಗಿರುವ ಶಾಸಕ ನರೇಂದ್ರಸ್ವಾಮಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದ ಸಮಾಜ ಕಲ್ಯಾಣ ಇಲಾಖೆಯ ಸ್ಪಷ್ಟ ಆದೇಶವಿದ್ದರೂ ನಗರಾಭಿವೃದ್ಧಿ ಕಾರ್ಯದರ್ಶಿ ಬಡ್ತಿ ನಿಯಮಗಳನ್ನು ಗಾಳಿಗೆ ತೂರಿ ವಂಚಿಸುತ್ತಿದ್ದಾರೆ. ಸಿದ್ದರಾಮಯ್ಯ ಆಪ್ತ ಕೆ.ಜೆ.ಜಾರ್ಜ್ ಸಚಿವರಾಗಿರುವ ಇಂಧನ ಇಲಾಖೆಯಲ್ಲಿ ೧೬೦ ಎಸ್ಸಿ ಎಸ್ಪಿ ಸಹಾಯಕ ಇಂಜಿನಿಯ ಗಳಿಗೆ ಬಡ್ತಿ ನೀಡದೆ ವಂಚಿಸಲಾಗುತ್ತಿದೆ. ಕೃಷಿ ಇಲಾಖೆಯಲ್ಲಿ ಸುಮಾರು ೫೦ ಎಸ್ಸಿಎಸ್ಪಿ ಅಧಿಕಾರಿಗಳಿಗೆ, ಡಾ. ಜಿ. ಪರಮೇಶ್ವರ್ ಗೃಹ ಮಂತ್ರಿಯಾಗಿದ್ದರೂ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ವಿವಿಧ ವೃಂದಗಳಿಗೆ ಬಡ್ತಿ ನೀಡುವಾಗ ಎಸ್ಸಿ ಎಸ್ಟಿ ನೌಕರರಿಗೆ ಅನ್ಯಾಯ ಎಸಗಲಾಗಿದೆ ಎಂದು ವಿವರಿಸಿದರು.

ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಅನ್ಯಾಯಗಳನ್ನು ಸರಿಪಡಿಸದಿದ್ದರೆ, ಈ ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಶಿವಶಂಕರ್ ಮುಖಂಡರಾದ ನಂಜುಂಡಸ್ವಾಮಿ, ಬಸವರಾಜು, ಎಂ.ಆರ್.ವಿನಯಕುಮಾರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ