Friday, November 20, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಸರ್ಕಾರಿ ಕಾಲೇಜಿನಲ್ಲಿ ಪ್ರಾಯೋಗಿಕ ಸಂಸತ್ ಚುನಾವಣೆ ಯಶಸ್ವಿ

ಮದ್ದೂರು ತಾಲ್ಲೂಕಿನ ಚಂದೂಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜು ಸಂಸತ್ ಚುನಾವಣೆಯನ್ನು ಪ್ರಾಯೋಗಿಕವಾಗಿ ಯಶಸ್ವಿಯಾಗಿ ನಡೆಸಲಾಯಿತು.

ಚುನಾವಣಾ ಆಯೋಗದ ಅಧಿಸೂಚನೆಯ ಮಾದರಿಯಲ್ಲಿಯೇ ಜು.21 ರ ಸೋಮವಾರ ಅಧಿಸೂಚನೆ ಹೊರಡಿಸಲಾಗಿತ್ತು. ಬುಧವಾರ ಬೆಳಿಗ್ಗೆ 10.30 ರಿಂದ 11.00 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ನಂತರ ನಾಮಪತ್ರ ಪರಿಶೀಲನೆ, ನಾಮಪತ್ರ ವಾಪಸ್ಸು ತೆಗೆದುಕೊಳ್ಳುವುದು ಸೇರಿದಂತೆ ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಅವಕಾಶ ನೀಡಲಾಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಗಳು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ಹಲವು ಭರವಸೆಯನ್ನು ನೀಡಿದರು.

ಮಧ್ಯಾಹ್ನ 12.30 ರಿಂದ 1.30 ರವರೆಗೆ ಮೊಬೈಲ್ ಬಳಸಿ ವಿಶೇಷವಾಗಿ ಚುನಾವಣೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ತುಂಬಾ ಕುತೂಹಲದಿಂದ ಮತ್ತು ಆಸಕ್ತಿಯಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಒಟ್ಟು 3 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಮಧ್ಯಾಹ್ನ 2 ಗಂಟೆಗೆ ಮತದಾನದ ಮೌಲ್ಯ ಮತ್ತು ಮತದಾರರ ಜವಾಬ್ದಾರಿ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಭಾರತೀ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ ಕೆ ಕೃಷ್ಣ ಪ್ರಸ್ತುತ ಸನ್ನಿವೇಶದಲ್ಲಿ ರಾಜಕೀಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಅದನ್ನು ಸರಿ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಅದರಲ್ಲೂ ಯುವ ಜನರು ವಿಶೇಷ ಪಾತ್ರವನ್ನು ವಹಿಸಬೇಕಾಗಿದೆ ಎಂದರು.

ಚುನಾವಣೆಯ ಪ್ರಕ್ರಿಯೆಯಲ್ಲಿ ವಿದ್ಯಾವಂತರೇ ಅದರಲ್ಲೂ ನಗರ ಪ್ರದೇಶದ ಜನರು ಹೆಚ್ಚು ಭಾಗಿಯಾಗುತ್ತಿಲ್ಲ. ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗುತ್ತಿದೆ. ಇದರ ಬದಲು ಪ್ರತಿಯೊಬ್ಬರೂ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ದಿನದ ಕೊನೆಯಲ್ಲಿ ಫಲಿತಾಂಶವನ್ನು ಘೋಷಿಸಲಾಯಿತು. ಚುನಾವಣೆಗೂ ಮೊದಲೇ ವಿದ್ಯಾರ್ಥಿಗಳೇ ತಯಾರಿಸಿದ ವಿದ್ಯುನ್ಮಾನ ಮತಯಂತ್ರ, ಕಂಟ್ರೋಲ್ ಯೂನಿಟ್ ಮತ್ತು VVPAT ಗಳ ಮಾದರಿಯನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ಚುನಾವಣೆಯ ಪ್ರಕ್ರಿಯೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಹನುಮಂತು ಮತಗಟ್ಟೆ ಅಧಿಕಾರಿಯಾಗಿ, ಉಪನ್ಯಾಸಕರಾದ ಮಲ್ಲಿಕಾಂಬ ಎಸ್ ಎಂ, ಗೀತಾ ಸಿ, ಪ್ರಜ್ಞಾ ಕೆ, ಅನಿತಾ ಹೆಚ್ ಎ, ಸಿಂಧು ಹೆಚ್ ಟಿ, ರೂಪ ಪಿ ರವರು ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯಶಾಸ್ತ್ರ ಉಪನ್ಯಾಸಕ ಪೃಥ್ವಿರಾಜ್ ಬಿ ಎಲ್ ವಹಿಸಿಕೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ