ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ದ ಅಧಿಕಾರಿಗಳು ಯಾವುದೇ ಭಯಪಡದೇ ಮೇಲ್ಪಟ್ಟದ ಅಧಿಕಾರಿಗಳಿಗೆ ದೂರು ನೀಡಲು ಮುಂದಾಗಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ ನರೇಂದ್ರಸ್ವಾಮಿ ಸಲಹೆ ನೀಡಿದರು.
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ದ ಅಧಿಕಾರಿಗಳು ಯಾವುದೇ ಭಯಪಡದೇ ಮೇಲ್ಪಟ್ಟದ ಅಧಿಕಾರಿಗಳಿಗೆ ದೂರು ನೀಡಲು ಮುಂದಾಗಬೇಕು, ತಾಲ್ಲೂಕಿನಲ್ಲಿ ಆರ್ಟಿಐ ಹೆಸರಿನಲ್ಲಿ ಮಹಿಳಾ ವೈದ್ಯರು ಸೇರಿದಂತೆ ಹಲವು ಅಧಿಕಾರಿಗಳನ್ನು ಶೋಷಣೆ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ, ಅಧಿಕಾರಿಗಳು ಸರ್ಕಾರದ ಭಾಗವಾಗಿದ್ದು, ಯಾರೂ ಕೂಡ ಧೃತಿಗೆಡಬಾರದು, ಮುಕ್ತ ವಾತಾವರಣದಲ್ಲಿ ಕೆಲಸ ಮಾಡಬೇಕು ಈಬಗ್ಗೆ ಗಮನ ಹರಿಸಬೇಕೆಂದು ಡಿವೈಎಸ್ಪಿ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರು.

ಮಳವಳ್ಳಿ ತಾಲ್ಲೂಕಿನ ಎಲ್ಲಾ ಅಧಿಕಾರಿಗಳನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಲಾಗಿದೆ, ಜೊತೆಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕೊಟ್ಟಿದ್ದರೂ ಕೂಡ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದರೇ ಸಹಿಸುವುದಿಲ್ಲ ಎಂದು ಕಿಡಿಕಾರಿದರು.
ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು, ತಾಲ್ಲೂಕಿನ ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಿದರೇ ಸಾರ್ವಜನಿಕರ ಸಮಸ್ಯೆಗಳು ಸುಲಭವಾಗಿ ಬಗೆಹರಿಯುತ್ತವೆ, ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸಿದರೇ ನಮಗೂ ಒಳ್ಳೇಯ ಹೆಸರು ಬರುತ್ತದೆ ಎಂದು ತಿಳುವಳಿಕೆ ನೀಡಿದರು.
ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಅಬಕಾರಿ ಅಧಿಕಾರಿಗಳು ಎಚ್ಚರವಹಿಸಬೇಕು, ಮೊರಾರ್ಜಿ ವಸತಿ ಶಾಲೆಗಳಲ್ಲಿ ಹಾಕಲಾಗಿರುವ ಸಿಸಿ ಕ್ಯಾಮಾರಗಳು ಕೆಲಸ ನಿರ್ವಹಿಸುತ್ತಿಲ್ಲದಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ ಸರಿಪಡಿಸಬೇಕು, ಜೊತೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸೌಲಭ್ಯದ ಬಗ್ಗೆ ಮಾಹಿತಿ ಪಡೆಯಬೇಕೆಂದು ಹೇಳಿದರು.
ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಬೇಕಾದ ಸವಲತ್ತು ಒದಗಿಸಲಾಗುವುದು. ಕ್ಲಸ್ಟರ್ ಮಟ್ಟದಲ್ಲಿ ಮಲ್ಪಿಮೀಡಿಯಾ ಸೆಂಟರ್ಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳ ಉಪಯೋಗಕ್ಕೆ ನೀಡಲಾಗುವುದು. ಎಸ್ಡಿಎಂಸಿ ಆಡಳಿತ ಮಂಡಳಿ ಮಲ್ಪಿಮಿಡಿಯಾ ಸೆಂಟರ್ಗೆ ವಿದ್ಯಾರ್ಥಿಗಳು ಹೋಗಿ ಬರಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ವಿಧಾನಪರಿಷತ್ ಸದಸ್ಯ ಕೆ. ವಿವೇಕನಂದ ಮಾತನಾಡಿ, ಹಿಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಗೆ ದಾನವನ್ನು ನೀಡಿರುವ ಆಸ್ತಿಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂದಾಗಬೇಕು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲೆಗೆ ದಾನವನ್ನು ನೀಡಿರುವ ಆಸ್ತಿಗಳ ಮೇಲೆ ಕೇಸು ದಾಖಲಿಸುತ್ತಿದ್ದಾರೆ. ದಾನವಾಗಿ ನೀಡಿರುವ ಆಸ್ತಿ ಶಿಕ್ಷಣ ಇಲಾಖೆ ಹೆಸರಿಗೆ ಬಂದಿಲ್ಲ, ಇಂಥ ಪ್ರಕರಣಗಳ ಬಗ್ಗೆ ತ್ವರಿತವಾಗಿ ಕ್ರಮ ವಹಿಸಬೇಕು. ಶಿಕ್ಷಕರ ವೈದ್ಯಕೀಯ ಬಿಲ್ ಬಾಕಿ ಉಳಿಯಬಾರದು ಎಂದು ಬಿಇಒ ವಿ.ಇ.ಉಮಾ ಅವರಿಗೆ ಸೂಚಿಸಿ ಶೌಚಾಲಯ, ಕಟ್ಟಡದ ದುರಸ್ತಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದರು.
ಬಿಇಒ ಪ್ರತಿಕ್ರಿಯಿಸಿ ಈಗಾಗಲೇ ತಹಶೀಲ್ದಾರ್ ಅವರಿಗೆ ಪತ್ರ ಬರೆಯಲಾಗಿದೆ. ಸದ್ಯದಲ್ಲಿಯೇ ಆಸ್ತಿ ಸಂರಕ್ಷಣಾ ಅಭಿಯಾನ ನಡೆಸಲಾಗುವುದು. ಅತಿಥಿ ಶಿಕ್ಷಕರ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಎಸ್.ವಿ ಲೊಕೇಶ್, ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ಎಚ್.ಜಿ ಶ್ರೀನಿವಾಸ್, ಡಿವೈಎಸ್ಪಿ ಪಿ. ಕೃಷ್ಣಪ್ಪ ತಾಲ್ಲೂಕು ಉಸ್ತುವಾರಿ ಕಾರ್ಯದರ್ಶಿ ಸುಶೀಲಮ್ಮ, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲ್ಲೂಕು ಅಧ್ಯಕ್ಷ ಮಾದೇಶ ಇದ್ದರು.




