Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲೂ ರಸ್ತೆಗಿಳಿಯದ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ; ಖಾಸಗಿ ವಾಹನಗಳ ಮೊರೆ ಹೋದ ಜಿಲ್ಲಾಡಳಿತ

ಕೆ.ಎಸ್.ಆರ್.ಟಿ.ಸಿ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಮಂಗಳವಾರ ಮುಂಜಾನೆಯಿಂದ ಮಂಡ್ಯ ಜಿಲ್ಲೆಯಾದ್ಯಂತ ಸಾರಿಗೆ ಬಸ್ಸುಗಳು ರಸ್ತೆಗಿಳಿಯಲಿಲ್ಲ. ಈ ನಡುವೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಾಸಗಿ ವಾಹನಗಳನ್ನು ರಸ್ತೆಗಿಳಿಸಲು ಕ್ರಮ ಕೈಗೊಂಡಿದ್ದಾರೆ.

ಇಂದು ಮಂಡ್ಯ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರಾಜ್ಯಾದ್ಯಂತ ಕೆ.ಎಸ್.ಆರ್.ಟಿ.ಸಿ ವಾಹನ ಚಾಲಕರು ಹಾಗೂ ನಿರ್ವಹಕರು ಮುಷ್ಕರಕ್ಕೆ ಕರೆ ನೀಡಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಂಡ್ಯ ವಿಭಾಗ ಕೆ.ಎಸ್.ಆರ್.ಟಿ.ಸಿ ಜಿಲ್ಲಾ ನಿಯಂತ್ರಕರೊಂದಿಗೆ ಸಭೆ ನಡೆಸಲಾಗಿದೆ ಎಂದರು.

ಮಂಡ್ಯ ವಿಭಾಗ ಕೆ.ಎಸ್.ಆರ್.ಟಿ.ಸಿ ಜಿಲ್ಲಾ ನಿಯಂತ್ರಕರು ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಲ್ಲರೂ ಕೆಲಸಕ್ಕೆ ಹಾಜರಾಗುವಂತೆ ಇಂದು ಬೆಳಿಗ್ಗೆ ಕರೆ ಮಾಡಿ ಮನವಿ ಮಾಡಿರುತ್ತಾರೆ, ಆದರೂ ಯಾರು ಕೆಲಸಕ್ಕೆ ಹಾಜರಾಗಿರುವುದಿಲ್ಲ ಎಂದರು.

ಖಾಸಗಿ ವಾಹನಗಳ ಮೊರೆ

ಮಂಡ್ಯ ಜಿಲ್ಲೆಯಲ್ಲಿ 215, ಖಾಸಗಿ ಬಸ್, 272 ಮಿನಿ ಬಸ್ ಗಳಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್ ವ್ಯವಸ್ಥೆ ಮಾಡಲಾಗಿದೆ. ಕೆ.ಎಸ್.ಆರ್.ಟಿ.ಸಿ ಯಲ್ಲಿ 525 ಬಸ್ ಗಳು 475 ರೂಟ್ ಗಳಿದ್ದು, ರೂಟ್ ಗಳಿಗೆ ಅನುಗುಣವಾಗಿ ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಟೋ ರಿಕ್ಷಾ ಹಾಗೂ ಖಾಸಗಿ ಬಸ್ ಗಳ ನಿರ್ವಾಹಕರೊಂದಿಗೆ ಈಗಾಗಲೇ ಚರ್ಚಿಸಿ ಸಾರ್ವಜನಿಕರಿಗೆ ಹೆಚ್ಚಿನ ದರ ವಿಧಿಸಬಾರದು ಎಂದು ಸೂಚನೆ ನೀಡಲಾಗಿದೆ ಎಂದರು.

ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಕಡಿತಗೊಳಿಸುವಂತೆ ಸರ್ಕಾರ ಆದೇಶ ಮಾಡಿರುತ್ತದೆ. ಸಿಬ್ಬಂದಿಗಳು ಸಹ ಸಾರ್ವಜನಿಕರ ಕಷ್ಟವನ್ನು ‌ಅರ್ಥಮಾಡಿಕೊಂಡು ಕೆಲಸಕ್ಕೆ ಹಾಜರಾಗುವಂತೆ‌ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಕೆ.ಎಸ್.ಆರ್.ಟಿ‌.ಸಿ ಜಿಲ್ಲಾ ನಿಯಂತ್ರಕ ನಾಗರಾಜು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ